ಅಡಕೆ ಸಾಲ ಮನ್ನಾ ಕೇಂದ್ರಕ್ಕೆ ಮಾಹಿತಿ
ಚಿಕ್ಕಮಗಳೂರು: ಹಳದಿ ಎಲೆ ರೋಗ ಪೀಡಿತ ಅಡಕೆ ತೋಟಗಳ ಮಾಲೀಕರ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದಿಂದ ಮಾಹಿತಿಯನ್ನು ಕೇಳಿದೆ ಎಂದು ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಸಾಲ ಮನ್ನಾಕ್ಕೆ ಸುಮಾರು 134 ಕೋಟಿ ಬೇಕೆಂದು ರಾಷ್ಟ್ರೀಯ ತೋಟಗಾರಿಕಾ ಮಿಷನ್ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಈ ಸಂಬಂಧ ಕೇಂದ್ರ ಸರ್ಕಾರ ರಾಜ್ಯ ಸರ್ಕಾರ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ. ಅಡಕೆ ಬೆಳೆಗಾರರ ಸಮಸ್ಯೆಗೆ ಸಂಬಂಧಿಸಿದಂತೆ ನಾವೇನೂ ಸುಮ್ಮನೆ ಕುಳಿತುಕೊಂಡಿಲ್ಲ. ಈ ಸಮಸ್ಯೆ ಪರಿಹಾರಕ್ಕಾಗಿ ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದೇವೆ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.
ಅವರು ಈ ಕ್ಷೇತ್ರದ ಸಂಸದರಾಗಿದ್ದರು, ಸಿಎಂ ಆಗಿದ್ದರು, ಅವರದೇ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದು, ಜಿಲ್ಲೆಯಲ್ಲಿ ಇಬ್ಬರು ಸಚಿವರು ಇದ್ದರು. ಅವರ ಕಾಲದಲ್ಲೂ ಅಡಕೆ ಸಮಸ್ಯೆ ಇತ್ತು. ಆಗ ಯಾವುದೇ ಪ್ರಯತ್ನ ಮಾಡದೆ, ಇದೀಗ ನಮ್ಮ ಮೇಲೆ ವಿನಾಕರಣ ಆರೋಪ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿಯನ್ನು ತರಾಟೆ ತೆಗೆದುಕೊಂಡರು.
ವಿಧಾನಪರಿಷತ್ ಸದಸ್ಯೆ ಮೋಟಮ್ಮ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್, ಎಂ.ಎಲ್. ಮೂರ್ತಿ ಇದ್ದರು.