ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮತದಾನ ಹೆಚ್ಚಿಸಲು ಮನೆ ಮನೆಗೆ ತೆರಳಿ ಜಾಗೃತಿ

Rashmi Kasaragodu
Updated On : 21 Mar 2014, 12:07 pm

ಕ.ಪ್ರ.ವಾರ್ತೆ   ಚಿಕ್ಕಮಗಳೂರು   ಮಾ. 20
ಲೋಕಸಭಾ ಚುನಾವಣೆಗೆ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ನಗರ, ಪಟ್ಟಣ ಪ್ರದೇಶಗಳಲ್ಲಿ ಪ್ರತಿ ಮನೆಗೆ ತೆರಳಿ ಮತದಾನದ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಬಿ. ಕರುಣಾಕರ್ ಹೇಳಿದ್ದಾರೆ.
ಜಿಲ್ಲಾ ಸ್ವಿಪ್ ಸಮಿತಿ ವತಿಯಿಂದ ಮತದಾರರಲ್ಲಿ ಜಾಗೃತಿ ಮೂಡಿಸುವ ಸಂಬಂಧ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಗರ, ಪಟ್ಟಣ ಪ್ರದೇಶಗಳಲ್ಲಿ ಗ್ರಾಮೀಣ ಭಾಗಗಳಿಗೆ ಹೋಲಿಸಿದಾಗ ಕಡಿಮೆ ಪ್ರಮಾಣದ ಮತದಾನವಾಗಿರುವ ಪ್ರದೇಶದಲ್ಲಿ ಹಾಗೂ ಶೇ. 50ಗಿಂತ ಕಡಿಮೆ ಮತದಾನ ಆಗಿರುವ ಪ್ರದೇಶಗಳನ್ನು ಗುರಿಯಾಗಿರಿಸಿ ಸ್ವಿಪ್‌ನ ವಿವಿಧ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದರು.
ಕರಪತ್ರ ಹಂಚಿಕೆ: ಮನೆ- ಮನೆಗೆ ತೆರಳಿ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪುರಸಭೆ, ನಗರಸಭೆ, ಪಟ್ಟಣ ಪಂಚಾಯಿತಿಗಳ ಸಿಬ್ಬಂದಿ, ಶಿಕ್ಷಣ ಇಲಾಖೆ, ಬಿಸಿಎಂ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕರು ಭಾಗವಹಿಸಲಿದ್ದಾರೆ. ಈ ತಂಡವು ಆಯಾ ವಾರ್ಡ್‌ಗಳ ಪ್ರತಿ ಮನೆಗಳಿಗೆ ತೆರಳಿ, ಮತದಾನದ ಮಹತ್ವ ತಿಳಿಸಿ, ಮಾಹಿತಿಗಳನ್ನು ನೀಡಲಿದ್ದಾರೆ. ಮತದಾನದ ಅರಿವು ಮೂಡಿಸುವ ಕರಪತ್ರಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಗುವುದು ಎಂದು ಹೇಳಿದರು.
ಮತದಾರರಲ್ಲಿ ಅರಿವು ಮೂಡಿಸಲು ಸಂತೆ, ಜಾತ್ರೆಯಂತಹ ವಿಶೇಷ ಕಾರ್ಯಕ್ರಮದಲ್ಲಿ ಬೀದಿ ನಾಟಕ ಹಮ್ಮಿಕೊಳ್ಳಲಾಗುವುದು ಎಂದ ಅವರು, ಯುವ ಮತದಾರರಿಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಾಜಪ್ಪ, ನಗರಸಭಾ ಆಯುಕ್ತ ನಾಗಭೂಷಣ್, ಸಮಾಜ ಕಲ್ಯಾಣಾಧಿಕಾರಿ ಮಂಜುನಾಥ್, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement