29ರಂದು ಜಿಲ್ಲೆಯಲ್ಲಿ ಸಿಎಂ ಪ್ರಚಾರ
ಕ.ಪ್ರ.ವಾರ್ತೆ ಚಿಕ್ಕಮಗಳೂರು ಮಾ.22
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ.29ರಂದು ಚಿಕ್ಕಮಗಳೂರಿಗೆ ಆಗಮಿಸಿ, ಕಾಂಗ್ರೆಸ್ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್ ತಿಳಿಸಿದ್ದಾರೆ.
ಅಂದು ಬೆಳಗ್ಗೆ ಹಾಸನಕ್ಕೆ ಆಗಮಿಸಲಿರುವ ಮುಖ್ಯಮಂತ್ರಿಯವರು ಅದೇ ದಿನ ಮಧ್ಯಾಹ್ನ 2 ಗಂಟೆಗೆ ಚಿಕ್ಕಮಗಳೂರಿಗೆ ಆಗಮಿಸಿ, ಹಿರೇಮಗಳೂರು ಸಮೀಪದಲ್ಲಿರುವ ಮೈದಾನದಲ್ಲಿ ನಡೆಯಲಿರುವ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ಹೇಳಿದರು.
ನಾಳೆ ಕಚೇರಿ ಉದ್ಘಾಟನೆ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಕ್ಷೇತ್ರದಲ್ಲಿ ಬ್ಲಾಕ್ ವಾರು ಸಭೆಗಳನ್ನು ನಡೆಸಿದ್ದಾರೆ. ಪ್ರಚಾರದ ದೃಷ್ಟಿಯಿಂದ ನಗರದ ಕೆ.ಎಂ. ರಸ್ತೆಯಲ್ಲಿರುವ ಗುತ್ತಿಗೆದಾರರ ಕಟ್ಟಡದಲ್ಲಿ ಪಕ್ಷದ ಚುನಾವಣಾ ಕಚೇರಿಯನ್ನು ತೆರೆಯಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಮಾ.24ರಂದು ಈ ಕಚೇರಿಯನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಕೆ. ಜಯಪ್ರಕಾಶ್ ಹೆಗ್ಡೆ ಅವರು ಮಾ.26ರಂದು ಉಡುಪಿಯಲ್ಲಿ ನಾಮಪತ್ರ ಸಲ್ಲಿಸಲಿದ್ದು, ಅಂದು ಜಿಲ್ಲೆಯಿಂದ ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದ ಅವರು, ಈ ಎಲ್ಲಾ ಕಾರ್ಯಕ್ರಮಗಳ ಹಿನ್ನಲೆಯಲ್ಲಿ ಮಾ.24ರಂದು ಜಿಲ್ಲಾ ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್ ಮಾತನಾಡಿ, ಪ್ರತಿಪಕ್ಷಗಳು ಬೇರೆ ಜಿಲ್ಲೆಯವರನ್ನು ಚುನಾವಣಾ ಕಣಕ್ಕೆ ಇಳಿಸಿರುವುದು ನಾಚಿಕೆಗೇಡಿನ ಸಂಗತಿ. ಇಲ್ಲಿನ ಜನರ ಜೀವನ ಮತ್ತು ಗಂಭೀರವಾಗಿರುವ ಕೆಲವು ಸಮಸ್ಯೆಗಳ ಬಗ್ಗೆ ಅರಿವಿಲ್ಲದವರನ್ನು ಸ್ಪರ್ಧೆಗೆ ಇಳಿಸಿವೆ. ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ರಾಜ್ಯದ ಇಂಧನ ಸಚಿವರಾಗಿದ್ದಾಗ ಒಮ್ಮೆಯೂ ಜಿಲ್ಲೆಗೆ ಭೇಟಿ ನೀಡಿರಲಿಲ್ಲ. ಅವರಿಗೆ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಅರಿವಿಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಚಿಕ್ಕಮಗಳೂರು ಬ್ಲಾಕ್ ಸಮಿತಿ ಅಧ್ಯಕ್ಷ ಶ್ರೀಧರ್ ಉರಾಳ್ ಉಪಸ್ಥಿತರಿದ್ದರು.