ಬಿಜೆಪಿಯಲ್ಲಿ ಬರೀ ಬಾಯಿಬಡುಕರು
ಚಿಕ್ಕಮಗಳೂರು: ಬಿಜೆಪಿಯವರು ಬರೀ ಬಾಯಿ ಬಡುಕರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್ ಆರೋಪಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಗುರುವಾರ ನಡೆದ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು, ಬಿಜೆಪಿ ಪಕ್ಷದವರೇ ಈ ಕ್ಷೇತ್ರದಲ್ಲಿ ಸಂಸದರಾಗಿದ್ದರು. ಅವರ ಅಧಿಕಾರದ ಅವಧಿಯಲ್ಲಿ ಮಾಡಿದ್ದಾದರೂ ಏನೆಂದು ಪ್ರಶ್ನಿಸಿದರು.
ಆಗ ಜಿಲ್ಲೆಯನ್ನು ಅಭಿವೃದ್ಧಿ ಮಾಡದೇ ಈಗ ಕಾಂಗ್ರೆಸ್ ಬಗ್ಗೆ ಟೀಕೆ ಮಾಡುವುದಕ್ಕೆ ನೈತಿಕತೆ ಏನಿದೆ? ಟೀಕೆ ಮಾಡುವವರಿಗೆ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ. ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಮನೆ ಮನೆಗಳಿಗೆ ತೆರಳಿ ಪ್ರಚಾರ ಮಾಡಬೇಕು. ಈ ಕ್ಷೇತ್ರದಲ್ಲಿ ಕೇಂದ್ರದ ಯುಪಿಎ ಸರ್ಕಾರದ ಸಾಧನೆಯೊಂದಿಗೆ ಕ್ಷೇತ್ರದ ಸಂಸದ ಜಯಪ್ರಕಾಶ್ ಹೆಗ್ಡೆ ಉತ್ತಮವಾದ ಜನಪರ ಕೆಲಸ ಮಾಡಿದ್ದಾರೆ. ಈ ಕುರಿತು ಜನಸಾಮಾನ್ಯರಿಗೆ ತಿಳಿಸುವ ಕೆಲಸವಾಗಬೇಕು ಎಂದು ಕಾರ್ಯಕರ್ತರಿಗೆ ಹೇಳಿದರು.
ಜನರಿಗೆ ತಿಳಿಸಿ: ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ಪಕ್ಷದ ಪ್ರಮುಖ ಹುದ್ದೆಯಲ್ಲಿರುವ ಎಲ್ಲರೂ ಸಾಮಾನ್ಯ ಕಾರ್ಯಕರ್ತರಂತೆ ಈ ಚುನಾವಣೆಯಲ್ಲಿ ದುಡಿಯಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಲವು ಯೋಜನೆಗಳನ್ನು ಜನರಿಗೆ ತಿಳಿಸಿಕೊಡುವ ಕೆಲಸವಾಗಬೇಕು ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್ ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಕಾರ್ಯನಿರ್ವಹಿಸಿದ್ದರಿಂದ ಜಯಪ್ರಕಾಶ್ ಹೆಗ್ಡೆಯವರ ಜಯಕ್ಕೆ ಕಾರಣವಾಯಿತು. ಪ್ರಸ್ತುತ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ವೈಯಕ್ತಿಕ ಹಿತಾಸಕ್ತಿ ಬದಿಗಿರಿಸಿ, ಪರಿಣಾಮಕಾರಿಯಾಗಿ ಪ್ರಚಾರವನ್ನು ಮಾಡಬೇಕು ಎಂದರು.
ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶ್ರೀಧರ್ ಉರಾಳ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಸ್. ಶಾಂತೇಗೌಡ, ಮಲ್ಲೇದೇವರಹಳ್ಳಿ ರಾಜು, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.