ಮತ ಪಟ್ಟಿಗೆ 25,636 ಹೆಸರು ಸೇರ್ಪಡೆ
ಚಿಕ್ಕಮಗಳೂರು: ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 25,636 ಜನರು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಳಿಸಿದ್ದಾರೆ.
ಹೆಸರು ಸೇರ್ಪಡೆ ಹಾಗೂ ಬಂದಿರುವ ಅರ್ಜಿಗಳ ಪರಿಶೀಲನಾ ಕಾರ್ಯ ಪೂರ್ಣಗೊಂಡಿದ್ದು, 25,636 ಅರ್ಜಿಗಳು ಹೊಸದಾಗಿ ಮತದಾರರ ಪಟ್ಟಿಗೆ ಸೇರಿಸಿಕೊಳ್ಳುವ ಅರ್ಹತೆ ಹೊಂದಿವೆ. ಅದ್ದರಿಂದ ಈ ಹಿಂದೆ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಇದ್ದ 8,38,894 ಮತದಾರರ ಸಂಖ್ಯೆ, ಈ ಲೋಕಸಭಾ ಚುನಾವಣೆಯಲ್ಲಿ 8,64,530ಕ್ಕೆ ಏರಿದೆ.
ಮಲೆನಾಡಲ್ಲಿ ಹೆಚ್ಚು ಅರ್ಜಿ: ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆಗೊಳಿಸಲು ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಚುನಾವಣಾ ಆಯೋಗದ ಸೂಚನೆಯ ಮೇರೆಗೆ ಜಿಲ್ಲಾಡಳಿತ ಪ್ರತಿ ಬೂತ್ಗಳಲ್ಲಿ ಸಿಬ್ಬಂದಿ ನೇಮಕ ಮಾಡಿತ್ತು. ಮಾ. 23ರವರೆಗೆ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಬಂದಿರುವ ಅರ್ಜಿಗಳನ್ನು ವಿಧಾನಸಭಾ ಕ್ಷೇತ್ರವಾರು ವಿಂಗಡಿಸಿದರೆ, ಮಲೆನಾಡಿನ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚು ಮಂದಿ ಹೊಸದಾಗಿ ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಕೊಂಡಿದ್ದಾರೆ.
ಅದರಲ್ಲೂ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಅರ್ಜಿಗಳು ಬಂದಿವೆ. ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ 5275, ಮೂಡಿಗೆರೆ- 5480, ಚಿಕ್ಕಮಗಳೂರು- 6151, ತರೀಕೆರೆ- 4999, ಕಡೂರು ಕ್ಷೇತ್ರದಲ್ಲಿ 3731 ಹೆಸರುಗಳು ಸೇರಿಕೊಂಡಿವೆ.
ಹೆಚ್ಚು ಮತದಾರರು: ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ತಲಾ ನಾಲ್ಕು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಉಡುಪಿ- ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಹೋಲಿಕೆ ಮಾಡಿದರೆ ಉಡುಪಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಮತದಾರರು ಇದ್ದಾರೆ.
ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆಗೊಳಿಸುವ ಮುನ್ನ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ 6,55,276 ಮತದಾರರು ಇದ್ದರು. ಈ ಪೈಕಿ 3,31,009 ಪುರುಷರು, 3,24,241 ಮಹಿಳಾ ಮತದಾರರು ಇದ್ದಾರೆ. ಉಡುಪಿ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 6,95,969 ಮತದಾರರಿದ್ದು, ಇವರಲ್ಲಿ 3,30,355 ಪುರುಷರು, 3,65,591 ಮಹಿಳಾ ಮತದಾರರು ಇದ್ದಾರೆ.
ಎರಡು ಜಿಲ್ಲೆಗಳ 8 ವಿಧಾನಸಭಾ ಕ್ಷೇತ್ರಗಳ ಮತದಾರರನ್ನು ಪರಿಗಣನೆಗೆ ತೆಗೆದುಕೊಂಡರೆ ಪುರುಷರಿಗಿಂತ ಮಹಿಳಾ ಮತದಾರರ ಸಂಖ್ಯೆ ಅಧಿಕವಾಗಿದೆ. ಆದರೆ, ಪ್ರತ್ಯೇಕಿಸಿ ನೋಡಿದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪುರುಷ ಮತದಾರರ ಸಂಖ್ಯೆ ಅಧಿಕವಾಗಿದೆ. ಈಗ ಹೊಸದಾಗಿ ಸೇರ್ಪಡೆಗೊಂಡಿರುವ ಮತದಾರರ ಪಟ್ಟಿಯಲ್ಲಿ ಮಹಿಳೆಯರಿಗಿಂತ ಪುರುಷರ ಸಂಖ್ಯೆಯೆ ಅಧಿಕವಾಗಿದೆ.