ಬೀರೂರು, ಕಡೂರು ನೀರು ಪೂರೈಕೆ ಕಾಮಗಾರಿ ಪೂರ್ಣ
ಚಿಕ್ಕಮಗಳೂರು: ಬೀರೂರು ಹಾಗೂ ಕಡೂರು ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿ ಪೂರ್ಣಗೊಂಡಿದ್ದು, ಇದೀಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ರಸ್ತೆಯನ್ನು ಅಗಲೀಕರಣ ಮಾಡುವ ಪ್ರಸ್ತಾಪವನ್ನು ಮುಂದಿಟ್ಟಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮೇ 6 ರಂದು ಚಿಕ್ಕಮಗಳೂರಿನಲ್ಲಿ ಹಿರಿಯ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಹೇಳಿದ್ದಾರೆ.
ಭದ್ರಾ ಜಲಾಶಯದಿಂದ ಈ ಎರಡು ಪಟ್ಟಣಗಳಿಗೆ ನೀರು ಸರಬರಾಜು ಮಾಡಲು ಈಗಾಗಲೇ ಪ್ರಾಯೋಗಿಕವಾಗಿ ನೀರು ಹರಿಸಲಾಗಿದೆ ಎಂದು ತಿಳಿಸಿದರು.
ಈ ಎರಡು ಪಟ್ಟಣಗಳ ಮೂಲಕ ಹಾದು ಹೋಗಲಿರುವ ರಾಷ್ಟ್ರೀಯ ಹೆದ್ದಾರಿ 206 ಅಗಲೀಕರಣ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಇದರಿಂದಾಗಿ ಕುಡಿಯುವ ನೀರಿನ ಪೈಪ್‌ಲೈನ್‌ಗಳು ರಸ್ತೆಯ ಒಳಭಾಗದಲ್ಲಿ ಸೇರಿಕೊಳ್ಳುವುದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ತೊಂದರೆಯಾಗುವ ಸಾಧ್ಯತೆ ಇದೆ. ಇದನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಕಡೂರು ಹಾಗೂ ಬೀರೂರು ಪುರಸಭೆಯ ಹಿರಿಯ ಅಧಿಕಾರಿಗಳು ಒಳಗೊಂಡಂತೆ ಅಧಿಕಾರಿಗಳ ಸಭೆಯನ್ನು ತಮ್ಮ ಕಚೇರಿಯಲ್ಲಿ ಮೇ 6 ರಂದು ಕರೆಯಲಾಗಿದೆ ಎಂದು ಹೇಳಿದರು.
ಶಾಲೆ ಪುನಾರಂಭ: ಕುದುರೆಮುಖದಲ್ಲಿರುವ ಕೇಂದ್ರೀಯ ವಿದ್ಯಾಲಯ ಈಗಾಗಲೇ ಪುನಾರಂಭಗೊಂಡಿದ್ದು, ಅಲ್ಲಿನ ವಿದ್ಯಾರ್ಥಿಗಳು ಪ್ರವೇಶವನ್ನು ಪಡೆದಿದ್ದಾರೆ. ಎಂದು ತಿಳಿಸಿದರು.
ತನಿಕೋಡು ಬಳಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ವಾರ ಶೃಂಗೇರಿಯಲ್ಲಿ ಜಿಲ್ಲಾ ದಂಡಾಧಿಕಾರಿಗಳಾದ ತಾವು ಬಹಿರಂಗವಾಗಿ ವಿಚಾರಣೆಯನ್ನು ನಡೆಸುವುದಾಗಿ ತಿಳಿಸಿದರು. ಈ ಸಂಬಂಧ ಇನ್ನು ದಿನಗಳೊಳಗೆ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದು ಹೇಳಿದರು.