ಲೈಂಗಿಕ ಕಾರ್ಯಕರ್ತೆಯರಿಗೆ ಸೌಲಭ್ಯಕ್ಕೆ ಸೂಚನೆ
ಕ.ಪ್ರ.ವಾರ್ತೆ ್ಣ ಚಿಕ್ಕಮಗಳೂರು ್ಣ ಮೇ 8
ಲಿಂಗತ್ವ ಅಲ್ಪಸಂಖ್ಯಾತರಿಗೆ ಹಾಗೂ ಲೈಂಗಿಕ ಕಾರ್ಯಕರ್ತೆಯರಿಗೆ ಸರ್ಕಾರ ನೀಡುತ್ತಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸುವ ಜೊತೆಗೆ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತಮ್ಮ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಲಿಂಗತ್ವ ಅಲ್ಪಸಂಖ್ಯಾತರಿಗೆ ಸೌಲಭ್ಯ ಒದಗಿಸುವ ಹಾಗೂ ಲೈಂಗಿಕ ಕಾರ್ಯಕರ್ತೆಯರ ಪುನರ್ವಸತಿ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
400 ಪಿಂಚಣಿ ನೀಡಿ: ಲಿಂಗತ್ವ ಅಲ್ಪಸಂಖ್ಯಾತರ ಹಾಗೂ ಲೈಂಗಿಕ ಕಾರ್ಯಕರ್ತರಿಗೆ ಪುನರ್ವಸತಿ ಹಾಗೂ ಆದಾಯ ಉತ್ಪನ್ನ ಚಟುವಟಿಕೆಗಳಿಗೆ ಬ್ಯಾಂಕ್ ಸಾಲ ಹಾಗೂ ನಿಗಮದಿಂದ ಸಹಾಯಧನ ನೀಡಬೇಕು.
ಮಾಜಿ ದೇವದಾಸಿಯರಿಗೆ ನೀಡುತ್ತಿರುವ ರೀತಿಯಲ್ಲಿ 40 ವರ್ಷ ಮೀರಿದ ಲಿಂಗತ್ವ ಅಲ್ಪಸಂಖ್ಯಾತರಿಗೆ ತಿಂಗಳಿಗೆ 400 ಪಿಂಚಣಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಲು ಸೂಚಿಸಿದರು.
ಲಿಂಗತ್ವ ಅಲ್ಪಸಂಖ್ಯಾತರಿಗೆ ಹಾಗೂ ಲೈಂಗಿಕ ಕಾರ್ಯಕರ್ತರಿಗೆ ಬಿ.ಪಿ.ಎಲ್. ಪಡಿತರ ಚೀಟಿಗಳನ್ನು ವಿತರಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಪ್ರತ್ಯೇಕ ವೈದ್ಯಕೀಯ ಕೊಠಡಿ: ಇವರಿಗೆ ಉಚಿತವಾಗಿ ವೈದ್ಯಕೀಯ ನೆರವು ಹಾಗೂ ಪ್ರತ್ಯೇಕ ವೈದ್ಯಕೀಯ ಕೊಠಡಿಗಳನ್ನು ಒದಗಿಸಬೇಕು, ಯಶಸ್ವಿನಿ ಆರೋಗ್ಯ ವಿಮೆ ಮಾದರಿಯಲ್ಲಿ ಪ್ರತ್ಯಕ್ಷ ಆರೋಗ್ಯ ವಿಮೆ ಜಾರಿಗೆ ತರುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಕ್ರಮ ವಹಿಸಬೇಕು ಎಂದು ಹೇಳಿದರು.
ಕಾಲೇಜು ಶಿಕ್ಷಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಶೇ.1ರಷ್ಟು ಮೀಸಲಾತಿ ಅವಕಾಶವಿದ್ದು, ಈ ಕುರಿತು ಇಲಾಖೆ ಕ್ರಮಕೈಗೊಳ್ಳಬೇಕೆಂದು ಸೂಚಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರಯ್ಯ, ಜಿಲ್ಲಾ ಸರ್ಜನ್ ಡಾ. ಆರ್. ದೊಡ್ಡಮಲ್ಲಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಎ. ಜಯರಾಂ, ಲಿಂಗತ್ವ ಅಲ್ಪಸಂಖ್ಯಾತರ ಹಾಗೂ ಲೈಂಗಿಕ ಕಾರ್ಯಕರ್ತರ ಸಂಘದ ಪದಾಧಿಕಾರಿಗಳು ಹಾಜರಿದ್ದರು.