ಹಣ ಜಮಾ ಬಿಕ್ಕಟ್ಟನ್ನು ಸರ್ಕಾರ ಬಗೆಹರಿಸಲಿ
ಚಿಕ್ಕಮಗಳೂರು: ಭವಿಷ್ಯ ನಿಧಿಯ ಹಣ ಜಮಾ ಮಾಡುವ ವಿಚಾರದಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ರಾಜ್ಯ ಸರ್ಕಾರ ಕೂಡಲೇ ಪರಿಹರಿಸಬೇಕು ಎಂದು ಶಾಸಕ ಸಿ.ಟಿ. ರವಿ ಆಗ್ರಹಿಸಿದ್ದಾರೆ.
ಮೇ 20 ರೊಳಗೆ ಈ ಬಿಕ್ಕಟ್ಟು ಪರಿಹಾರವಾಗದೆ ಹೋದರೆ ಕಾಮಗಾರಿಯನ್ನು ಸ್ಥಗಿತಗೊಳಿಸುವುದಾಗಿ ಗುತ್ತಿಗೆದಾರರು ಹೇಳಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ತಿಳಿಸಿದರು.
ಕೆಲಸದ ಮೇಲೆ ಪರಿಣಾಮ: ಕಾರ್ಮಿಕ ಇಲಾಖೆಯ ತಪ್ಪು ಮಾಹಿತಿಯಿಂದಾಗಿ ಕಳೆದ ನಾಲ್ಕು ತಿಂಗಳಿಂದ ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರರಿಗೆ ಬಿಲ್ ಪಾವತಿಯಾಗುತ್ತಿಲ್ಲ. ಇಲಾಖೆಯ ನೌಕರರಿಗೂ ಸಂಬಳ ಇಲ್ಲದಂತಾಗಿದೆ. ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಈ ಸಮಸ್ಯೆ ಉಂಟಾಗಿದ್ದು, ರಾಜ್ಯ ಲೋಕೋಪಯೋಗಿ ಇಲಾಖೆಯ ಸಚಿವರು ಹಾಗೂ ಮುಖ್ಯಮಂತ್ರಿಯವರು ಕೂಡಲೇ ಮಧ್ಯ ಪ್ರವೇಶಿಸಿ ಈ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲದೆ ಹೋದರೆ ಅಭಿವೃದ್ಧಿ ಕೆಲಸಗಳ ಮೇಲೆ ದುಷ್ಪರಿಣಾಮ ಉಂಟಾಗಲಿದೆ ಎಂದರು.
ಬೆಳವಾಡಿ ಕೆರೆಗೆ ನೀರು ಹರಿಸುವ ಕಾಮಗಾರಿಯ ಕಾಲುವೆಯಲ್ಲಿ ಮಳೆಯಿಂದಾಗಿ ನೀರು ತುಂಬಿದ್ದು, ಇದರಿಂದ ಕಾಮಗಾರಿಗೆ ಅಡ್ಡಿಯಾಗಿದೆ. ಬೆಳವಾಡಿ ಕೆರೆಗೆ ತಾತ್ಕಾಲಿಕವಾಗಿ ನೀರು ಹರಿದು ಹೋಗುವಂತ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದ ಸಿ.ಟಿ. ರವಿ, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ 34 ಗ್ರಾಮ ಪಂಚಾಯ್ತಿಗಳ ಪೈಕಿ 18 ಗ್ರಾಮ ಪಂಚಾಯ್ತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ.
ಚಿಕ್ಕಮಗಳೂರು ಕಸಬಾ ಹೋಬಳಿಯ 2, ಲಕ್ಯಾ ಹೋಬಳಿಯ 9 ಹಾಗೂ ಸಖರಾಯಪಟ್ಟಣದ 7 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಈ ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಸಮಗ್ರ ಯೋಜನಾ ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇದರ ಜತೆಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ನೀರು ಕೊಡುವಂತೆ ತಿಳಿಸಿದ್ದೇನೆ ಎಂದರು.
ಪ್ರವಾಸೋದ್ಯಮ ಇಲಾಖೆಯಿಂದ ಸುಮಾರು 4 ಕೋಟಿ ವೆಚ್ಚದಲ್ಲಿ ದತ್ತಪೀಠದ ರಸ್ತೆಯನ್ನು ಅಭಿವೃದ್ಧಿಗೊಳಿಸುವ ಕಾಮಗಾರಿ ಆರಂಭಗೊಂಡಿದೆ.
ಬೆಳವಾಡಿ ಮತ್ತು ದೇವನೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಯಾತ್ರಿ ನಿವಾಸ್ ಕಾಮಗಾರಿ ಮುಕ್ತಾಯಗೊಳ್ಳುವ ಹಂತಕ್ಕೆ ಬಂದಿದೆ. ಅಯ್ಯನ ಕೆರೆ ಮತ್ತು ಹಿರೇಮಗಳೂರಿನಲ್ಲಿ ಕಲ್ಯಾಣಿ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ ಎಂದು ಹೇಳಿದರು.
ಮುಂದಿನ ವರ್ಷ ಕಾಲೇಜು ಆರಂಭ: ಆಲ್ದೂರಿನಲ್ಲಿ ಐಟಿಐ ಹಾಗೂ ಚಿಕ್ಕಮಗಳೂರಿನಲ್ಲಿ ಎಂಜಿನಿಯರಿಂಗ್ ಕಾಲೇಜು ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ. ಈ ಜಾಗವನ್ನು ಸ್ಥಳಾಂತರ ಮಾಡುವ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯೊಂದಿಗೆ ಮಾತನಾಡಿದ್ದೇನೆ. ಈ ಸಾಲಿನಲ್ಲಿ ಕಟ್ಟಡವನ್ನು ನಿರ್ಮಾಣ ಮಾಡಿ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕಾಲೇಜುಗಳನ್ನು ಆರಂಭಿಸುವಂತೆ ತಿಳಿಸಿದ್ದೇನೆ ಎಂದರು.
ಜಿಲ್ಲೆಗೆ 24 ಸಾರ್ವಜನಿಕ ಆಸ್ಪತ್ರೆಗಳು ದಿನದ 24 ಗಂಟೆ ಸೇವೆ ಸಲ್ಲಿಸಲು ತೆರೆಯಲಾಗಿತ್ತು. ಆದರೆ, ಇದೀಗ 12 ಆಸ್ಪತ್ರೆಗಳ ಸಿಬ್ಬಂದಿಯನ್ನು ಕಡಿತಗೊಳಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಸುತ್ತೋಲೆಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಎಚ್.ಡಿ. ತಮ್ಮಯ್ಯ, ನಗರಸಭಾಧ್ಯಕ್ಷ ಪುಷ್ಪರಾಜ್, ನಗರಾಧ್ಯಕ್ಷ ವರಸಿದ್ದಿ ವೇಣುಗೋಪಾಲ್, ಮುಖಂಡರಾದ ಸಿ.ಎಚ್. ಲೋಕೇಶ್, ಟಿ.ಆರ್. ರಾಜಶೇಖರ್, ಕೋಟೆ ರಂಗನಾಥ್ ಉಪಸ್ಥಿತರಿದ್ದರು.