ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿತ್ರದುರ್ಗ

ವೇತನ ತಾರತಮ್ಯ ನಿವಾರಣೆಗೆ ಒತ್ತಾಯ

Parashurama
Updated On : 14 Feb 2013, 11:16 am

ಚಿತ್ರದುರ್ಗ: ಶಿಕ್ಷಕರ, ಉಪನ್ಯಾಸಕರ ವೇತನ ತಾರತಮ್ಯ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಶಿಕ್ಷಕರ, ಉಪನ್ಯಾಸಕರ ಕ್ರಿಯಾ ಸಮಿತಿಯ ಜಿಲ್ಲಾ ಶಾಖೆ ವತಿಯಿಂದ ಶಿಕ್ಷಕರು ಮತ್ತು ಉಪನ್ಯಾಸಕರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು.
ಕೇಂದ್ರ ಸರ್ಕಾರ ಹಾಗೂ ನೆರೆಯ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರು ಹಾಗೂ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಅತ್ಯಂತ ಕಡಿಮೆ ಮೂಲ ವೇತನ ಪಡೆಯುತ್ತಿದ್ದಾರೆ. ಇತರೆ ಇಲಾಖೆಯ ನೌಕರರಿಗಿಂತ ಶಿಕ್ಷಕರ ಸಂಬಳದಲ್ಲಿ ತುಂಬಾ ತಾರತಮ್ಯವಿದೆ ಅದನ್ನು ಹೋಗಲಾಡಿಸುವಂತೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ನಿರಾಸೆ ಮೂಡಿಸಿದೆ: ಶಿಕ್ಷಕರು ಮತ್ತು ಉಪನ್ಯಾಸಕರಿಗೆ ವಿಶೇಷ ವೇತನ ತಾರತಮ್ಯ ನಿವಾರಿಸುವಂತೆ ಈ ಮೊದಲೇ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೂ, ಮುಖ್ಯಮಂತ್ರಿಗಳು ಬಜೆಟ್ ಮಂಡನೆ ಮಾಡುವಾಗ ಶಿಕ್ಷಕರ ಮತ್ತು ಉಪನ್ಯಾಸಕರ ವೇತನ ತಾರತಮ್ಯ ನಿವಾರಣೆ, ಮೂಲ ವೇತನದಲ್ಲಿ ವಿಶೇಷ ವೇತನ ವಿಲೀನಗೊಳಿಸುವ ಬಗ್ಗೆ ಪ್ರಸ್ತಾಪ ಮಾಡದಿರುವುದು ಶಿಕ್ಷಕರು ಮತ್ತು ಉಪನ್ಯಾಸಕ ವರ್ಗಕ್ಕೆ ತುಂಬಾ ನಿರಾಸೆಯುಂಟಾಗಿದೆ ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ಮಾದರಿಯಲ್ಲೇ ಮನೆ ಬಾಡಿಗೆ, ನಗರ ಭತ್ಯೆ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು ಆ ಪ್ರಕಾರ 6ನೇ ವೇತನ ಸಮಿತಿಯ ಶಿಫಾರಸುಗಳನ್ನು ಸರ್ಕಾರ ಅನುಷ್ಠಾನಕ್ಕೆ ತರುವ ಸಂದರ್ಭದಲ್ಲಿ 6ನೇ ವೇತನ ಸಮಿತಿಯ ಶಿಫಾರಸುಗಳನ್ನು ಸರ್ಕಾರ ಜನಗಣತಿ ಆಧಾರದ ಮೇಲೆ ಪುನರ್ ವರ್ಗೀಕರಿಸಿ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿತ್ತು.
ಕಡೆಗಣನೆ: ಈ ವರ್ಷದ ಆಯವ್ಯಯ ಮಂಡನೆಯಲ್ಲಿ ಕೇವಲ ಬೆಂಗಳೂರು ನಗರಕ್ಕೆ ಮಾತ್ರ ಸರ್ಕಾರಿ ನೌಕರರ ಮನೆ ಬಾಡಿಗೆ ಭತ್ಯೆಯನ್ನು ಶೇಕಡಾ.25 ರಿಂದ 30ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ಬೆಂಗಳೂರು ನಗರದ ನೌಕರರ ಸಮುದಾಯಕ್ಕೆ ಮಾತ್ರ ಅನುಕೂಲವಾಗಿದೆ. ರಾಜ್ಯದ ಇತರೆ ಜಿಲ್ಲೆಗಳಲ್ಲಿ ಹಾಗೂ ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವ ನೌಕರರನ್ನು ಸರ್ಕಾರ ಕಡೆಗಣಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರಾಥಮಿಕ ಶಾಲಾ ಶಿಕ್ಷಕರು, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಪದವಿಪೂರ್ವ ಉಪನ್ಯಾಸಕರಿಗೆ ಈಗ ನೀಡುವ ವಿಶೇಷ ವೇತನವನ್ನು ಮೂಲ ವೇತನದಲ್ಲಿ ವಿಲೀನಗೊಳಿಸಬೇಕು. ಈಗಿರುವ ವೇತನ ತಾರತಮ್ಯ ಹೋಗಲಾಡಿಸಬೇಕು.
ಬೆಂಗಳೂರಿನ ನಗರಕ್ಕೆ ಮನೆ ಬಾಡಿಗೆ ಹೆಚ್ಚಳ ಮಾಡಿದ ರೀತಿಯಲ್ಲಿ ಗ್ರಾಮೀಣ ಪಟ್ಟಣ ಪ್ರದೇಶಗಳಲ್ಲಿಯೂ ಸಹ ಮನೆ ಬಾಡಿಗೆ ಭತ್ಯೆಯನ್ನು ಶೇ.10ರಿಂದ 20ರಷ್ಟು ಹೆಚ್ಚಿಸಬೇಕೆಂದು ಸರ್ಕಾರದ ಗಮನ ಸೆಳೆದರು.
ರಾಜ್ಯ ಶಿಕ್ಷಕರ, ಉಪನ್ಯಾಸಕರ ಕ್ರಿಯಾ ಸಮಿತಿ ಜಿಲ್ಲಾ ಶಾಖೆ ಅಧ್ಯಕ್ಷ ಜಿ.ಎಸ್. ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಎ.ಎಚ್. ವೀರಣ್ಣ, ಉಪಾಧ್ಯಕ್ಷ ಎಸ್. ಲಕ್ಷ್ಮಣ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಜಿ. ಜಗದೀಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸೈಯದ್ ಅಫಾಖ್ ಅಹಮದ್ ಸೇರಿದಂತೆ ನೂರಾರು ಶಿಕ್ಷಕರು ಹಾಗೂ ಉಪನ್ಯಾಸಕರುಗಳು ಧರಣಿಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments