ಅಕ್ರಮ ಮರಳು ಸಾಗಾಣಿಕೆ ತಡೆಗೆ ಮನವಿ
ಕಪ್ರ ವಾರ್ತೆ, ಭರಮಸಾಗರ, ಮಾ.8
ಹೋಬಳಿಯ ಪ್ರಮುಖ ಸ್ಥಳಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಸಾಗಾಣಿಕೆಯನ್ನು ತಡೆಯಬೇಕು ಎಂದು ಆಗ್ರಹಿಸಿ ಶುಕ್ರವಾರ ಸುತ್ತಮುತ್ತಲ ಗ್ರಾಮಸ್ಥರು ಮತ್ತು ನಾನಾ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ನಾಡ ಕಚೇರಿ ಗ್ರಾಮ ಲೆಕ್ಕಾಧಿಕಾರಿ ಶಿವಶಂಕರ್ ಮೂಲಕ ತಹಸೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ಗ್ರಾಮದ ದೊಡ್ಡಕೆರೆ, ಎಮ್ಮನಘಟ್ಟ, ನಂದಿಹಳ್ಳಿ, ಇಸಾಮುದ್ರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದರೂ ಸಂಬಂಧಿತ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಸಣ್ಣ ನೀರಾವರಿ ಇಲಾಖೆ,ಪೊಲೀಸ್ ಇಲಾಖೆಗಳು ಸೇರಿದಂತೆ ಕಂದಾಯ ಇಲಾಖೆಗಳು ಅಕ್ರಮ ತಡೆಗಟ್ಟಲು ಕ್ರಮ ತೆಗೆದುಕೊಳ್ಳದೆ ಜಾಣ ಕುರುಡರಂತೆ ವರ್ತಿಸುತ್ತಿರುವ ಕಾರಣ ಅಕ್ರಮ ಮರಳುಗಾರಿಕೆ ಹೋಬಳಿಯಲ್ಲಿ ರಾಜಾರೋಷವಾಗಿ ನಡೆಯಲು ಸಾಧ್ಯವಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.
ಸಂಪತ್ತಿನ ಲೂಟಿಗೆ ಕಾರಣ: ನಾನಾ ಇಲಾಖಾ ಅಧಿಕಾರಿಗಳು ಮತ್ತು ಪ್ರಭಾವಿ ರಾಜಕಾರಣಿಗಳು ಅಕ್ರಮ ಮರಳು ಮಾಫಿಯಾಕ್ಕೆ ಸಾಥ್ ನೀಡಿರುವುದರಿಂದ ಅಕ್ರಮ ಮರಳು ಸಾಗಾಣಿಕೆ ಹಗಲು ರಾತ್ರಿಯೆನ್ನದೆ ನಿರಂತರವಾಗಿ ನಡೆಯಲು ಸಾಧ್ಯವಾಗಿದೆ. ಅಕ್ರಮ ಮರಳು ಸಾಗಾಟದ ಬಗ್ಗೆ ಪ್ರಮುಖ ಪತ್ರಿಕೆಗಳಲ್ಲಿ ನಿರಂತರ ಸುದ್ದಿಗಳು ಪ್ರಕಟವಾಗುತ್ತಿವೆ. ಆ ಬಗ್ಗೆ ಸೂಕ್ತವಾಗಿ ಸ್ಪಂದಿಸದ ನಾನಾ ಇಲಾಖಾ ಅಧಿಕಾರಿಗಳು ಇಲ್ಲಿನ ಮರಳು ಅಕ್ರಮ ತಡೆಗಟ್ಟಲು ಸೂಕ್ತ ಕ್ರಮ ಜರುಗಿಸಲು ಮುಂದಾಗದೆ ನೈಸರ್ಗಿಕ ಸಂಪತ್ತಿನ ಲೂಟಿಗೆ ಕಾರಣರಾಗಿದ್ದಾರೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಇನ್ನು ದೊಡ್ಡಕೆರೆ ವ್ಯಾಪ್ತಿ ಮತ್ತು ಎಮ್ಮನಘಟ್ಟ, ನಂದಿಹಳ್ಳಿ ಜಮೀನುಗಳಲ್ಲಿ ಅಕ್ರಮ ಮರಳು ಸಾಗಾಟ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರು ಸಂಬಂಧಿತ ಗಣಿ, ಕಂದಾಯ, ಪೊಲೀಸ್ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರೆ ಅಕ್ರಮ ಮರಳು ಸಾಗಾಣಿಕೆ ತಡೆಯಬೇಕಿರುವ ಬಗ್ಗೆ ಒಬ್ಬರು ಮತ್ತೊಬ್ಬರ ಕಡೆ ಬೆರಳು ತೋರಿಸುತ್ತಿದ್ದಾರೆ.
ಅಸಡ್ಡೆ ವಿರುದ್ಧ ಪ್ರತಿಭಟನೆ: ಮುಂಬರುವ ದಿನಗಳಲ್ಲಿ ಹೋಬಳಿ ವ್ಯಾಪ್ತಿಯ ಅಕ್ರಮ ಮರಳು ಸಾಗಾಣಿಕೆ ತಡೆಯದೆ ಹೋದರೆ ತಾಲೂಕು ಮತ್ತು ಜಿಲ್ಲಾ ಕಚೇರಿಗಳ ಎದುರು ಅಧಿಕಾರಿಗಳ ಅಸಡ್ಡೆ ವಿರುದ್ಧ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಮನವಿ ಪತ್ರದಲ್ಲಿ ಎಚ್ಚರಿಸಲಾಗಿದೆ.
ಗ್ರಾಮ ಲೆಕ್ಕಾಧಿಕಾರಿ ಶಿವಶಂಕರ್ ಮನವಿ ಪತ್ರ ಸ್ವೀಕರಿಸಿ ರಾಜಸ್ವ ನೀರಿಕ್ಷಕರ ಮೂಲಕ ತಹಸೀಲ್ದಾರ್ ಅವರಿಗೆ ಪತ್ರ ರವಾನಿಸಲಾಗುತ್ತದೆ ಎಂದು ತಿಳಿಸಿದರು. ಜಯಭಾರತ ರಕ್ಷಣಾ ವೇದಿಕೆ ತಾಲೂಕು ರೈತ ಘಟಕ ಅಧ್ಯಕ್ಷ ಸೂರಪ್ಪ, ಕರ್ನಾಟಕ ರಕ್ಷಣಾ ವೇದಿಕೆ ಹೋಬಳಿ ಘಟಕ ಅಧ್ಯಕ್ಷ ಪ್ರವೀಣ್ಕುಮಾರ್, ಸಂತೋಷ್, ಲೋಕೇಶ್, ಜಯಪ್ಪ, ನಾಗರಾಜ್, ಮಂಜುನಾಥ್, ಶ್ರೀನಿವಾಸ್ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.