ಸಚಿವ ನಿರಾಣಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಕ.ಪ್ರ.ವಾರ್ತೆ, ಬೆಂಗಳೂರು, ಏ.5
ಭೂಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಖಾಸಗಿ ದೂರಿನ ರದ್ದತಿ ಕೋರಿ ಸಚಿವ ಮುರುಗೇಶ್ ನಿರಾಣಿ ಸಲ್ಲಿಸಿರುವ ಅರ್ಜಿಯ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾ.ಆನಂದ ಭೈರಾರೆಡ್ಡಿ ಅವರಿದ್ದ ಏಕಸದಸ್ಯ ಪೀಠ ತೀರ್ಪನ್ನು ಕಾಯ್ದಿರಿಸಿದೆ. ಈ ಹಿಂದೆ ಏಕಸದಸ್ಯ ಪೀಠ, ದೂರಿನ ಆರೋಪಗಳ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ದೇವನಹಳ್ಳಿ ಸಮೀಪದ ಹೂವಿನನಾಯಕನಹಳ್ಳಿ ಸಮೀಪದ 20 ಎಕರೆ ಕೈಗಾರಿಕಾ ಜಮೀನನ್ನು ಸಚಿವರು ಕಾನೂನುಬಾಹಿರವಾಗಿ ಡಿನೋಟಿಫೈ ಮಾಡಿಸಿದ್ದಾರೆ ಎಂದು ಆರೋಪಿಸಿ ಆಲಂಪಾಶಾ ಎಂಬುವರು ಲೋಕಾಯುಕ್ತ ನ್ಯಾಯಾಲಯಕ್ಕೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಖಾಸಗಿ ದೂರು ದಾಖಲಿಸಿದ್ದರು. ಹೂವಿನನಾಯಕನಹಳ್ಳಿಯಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ನಿರ್ಮಿಸುವ ಯೋಜನೆಗೆ ಸಂಬಂಧಿಸಿದಂತೆ ತಮಗೆ ನೀಡಿದ್ದ ಜಮೀನಿನ ಗುತ್ತಿಗೆಯನ್ನು ನಕಲಿ ಸಹಿ ಮಾಡಿ ಸಚಿವರು ತಾವೇ ಪಡೆದುಕೊಂಡಿದ್ದಾರೆ. ಅಲ್ಲದೆ, ಈ ಭೂಮಿಯನ್ನು ಕಾನೂನುಬಾಹಿರವಾಗಿ ಡಿನೋಟಿಫೈ ಮಾಡಿಸಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ್ದಾರೆ. ಇದು ಅಧಿಕಾರ ದುರುಪಯೋಗ ಎಂದು ಅವರು ಆರೋಪಿಸಿದ್ದರು.