ನಿಯಮ ಉಲ್ಲಂಘಿಸಿದರೆ ಪ್ರಕರಣ ದಾಖಲಿಸಿ
ಮಂಗಳೂರು: ಸೆಕ್ಟರ್ ಮ್ಯಾಜಿಸ್ಟ್ರೇಟ್ಗಳೇ ಜಿಲ್ಲೆಯಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಹೊಣೆ ನಿರ್ವಹಿಸಲಿದ್ದು, ನಿಮ್ಮ ಆದೇಶವನ್ನು ಉಲ್ಲಂಘಿಸಿದರೆ ಐಪಿಸಿ ಸೆಕ್ಷನ್ 188ರಡಿ ಕ್ರಮ ತೆಗೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಹರ್ಷಗುಪ್ತ ಸೂಚನೆ ನೀಡಿದ್ದಾರೆ.
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಶುಕ್ರವಾರ ಸೆಕ್ಟರ್ ಮ್ಯಾಜಿಸ್ಟ್ರೇಟ್ ಮತ್ತು ರಿಟರ್ನಿಂಗ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮೇಲಿನಿಂದ ಕೆಳಹಂತದ ವರೆಗೆ ಸಂವಹನ ಕೊರತೆ ಬಾಧಿಸಬಾರದು.
ವಾಹನ ಬಳಸುವ ಬಗ್ಗೆ, ಹೊಟೇಲ್ ಅಥವಾ ಕ್ಯಾಟರಿಂಗ್ನಿಂದ ಊಟ ಪೂರೈಕೆ ಬಗ್ಗೆ, ಶಾಮಿಯಾನ ಹಾಕಲು ಸಹಿತ ಪೂರ್ವಾನುಮತಿ ಪಡೆಯಬೇಕಾಗುತ್ತದೆ. ಯಾವುದೇ ರ್ಯಾಲಿಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಅಬಕಾರಿ ಇಲಾಖೆ ಅಧಿಕಾರಿಗಳು ಚುನಾವಣೆ ಸಂದರ್ಭ ಹೆಚ್ಚಿನ ಜಾಗೃತಿಯಿಂದ ಕೆಲಸ ಮಾಡಬೇಕು. ಕರ್ತವ್ಯ ನಿರ್ವಹಣೆಯಲ್ಲಿ ಯಾವುದೇ ರೀತಿಯ ಉದಾಸೀನ ಮಾಡದೆ ಕಾರ್ಯನಿರ್ವಹಿಸಬೇಕು ಎಂದರು.
ನಗರ ಪೊಲೀಸ್ ಕಮಿಷನರ್ ಮನೀಷ್ ಕರ್ಭೀಕರ್ ಮಾತನಾಡಿ, ಸ್ಟ್ಯಾಟಿಕ್ ಚೆಕ್ಪೋಸ್ಟ್ಗಳಲ್ಲಿ ಕಾರ್ಯನಿರ್ವಹಿಸುವ ಬಗ್ಗೆ ಹಾಗೂ ಯಾವುದೇ ರೀತಿಯ ಸಂಶಯಾಸ್ಪದ ಘಟನೆ ಬಗ್ಗೆ ಮಾಹಿತಿ ಲಭ್ಯವಾದರೆ ಅದನ್ನು ವೀಡಿಯೋ ಚಿತ್ರೀಕರಣ ಮಾಡುವಂತೆ ನಿರ್ದೇಶನ ನೀಡಿದರು.
ರಿಟರ್ನಿಂಗ್ ಅಧಿಕಾರಿಗಳು, ಸೆಕ್ಟರ್ ಮ್ಯಾಜಿಸ್ಟ್ರೇಟ್ಗಳು ತಮ್ಮ ವ್ಯಾಪ್ತಿಯ ಇನ್ಸ್ಪೆಕ್ಟರ್ಗಳ ಜತೆ ಸಂಪರ್ಕ ಇರಿಸಿಕೊಂಡು ನೀತಿ ಸಂಹಿತೆ ಉಲ್ಲಂಘಟನೆಯಾಗದಂತೆ ನೋಡಿಕೊಳ್ಳಿ ಎಂದರು.