ಗೋಹತ್ಯೆ ನಿಷೇಧ: ಸಿದ್ದರಾಮಯ್ಯ ನಿಲವು ಸ್ಪಷ್ಟನೆಗೆ ನಳಿನ್ ಆಗ್ರಹ
ಪುತ್ತೂರು: ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಮತ್ತು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಶಕುಂತಳಾ ಶೆಟ್ಟಿ ಗೋಹತ್ಯೆ, ಭಯೋತ್ಪಾದನೆ ಮತ್ತು ರಾಮಮಂದಿರ ವಿಚಾರದಲ್ಲಿ ತಮ್ಮ ನಿಲುವನ್ನು ಸಾರ್ವಜನಿಕರ ಮುಂದೆ ಸ್ಪಷ್ಟಪಡಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಆಗ್ರಹಿಸಿದ್ದಾರೆ. ಸೋಮವಾರ ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 'ಕಾಂಗ್ರೆಸ್ ಬಹುಮತಕ್ಕೆ ಬಂದಲ್ಲಿ ರಾಜ್ಯದಲ್ಲಿ ಗೋಹತ್ಯೆ ನಿಷೇಧ ರದ್ದು ಮಾಡಲಾಗುವುದು' ಎಂದು ಸಿದ್ದರಾಮಯ್ಯ ಹೇಳಿಕೆ ನೀಡುವ ಮೂಲಕ ರಾಜ್ಯದ ಬಹುಸಂಖ್ಯಾತರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಮತ್ತು ಕೋಮು ದಳ್ಳುರಿ ಸೃಷ್ಟಿಸುವ ರಾಜಕಾರಣ ನಡೆಸುತ್ತಿದ್ದಾರೆ. ಹಿಂದೊಮ್ಮೆ ಕನಕ ಗೋಪುರದ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿದ್ದ ಸಿದ್ದರಾಮಯ್ಯ ಇದೀಗ ಮತಬ್ಯಾಂಕ್ ರಾಜಕಾರಣಕ್ಕಾಗಿ ಹಿಂದುಗಳ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆ ನೀಡಿದ್ದಾರೆ ಎಂದು ದೂರಿದರು.