ಜ. 31ರಿಂದ ರಾಜ್ಯಮಟ್ಟದ ಯುವಜನ ಮೇಳ
ಮಣಿಪಾಲ: ಈ ಬಾರಿಯ ರಾಜ್ಯಮಟ್ಟದ ಯುವಜನ ಮೇಳವನ್ನು ಉಡುಪಿ ಜಿಲ್ಲೆಯ ಎಲ್ಲೂರಿನಲ್ಲಿ ನಡೆಸಲಾಗುತ್ತಿದ್ದು, ಇದರ ಪೂರ್ವಭಾವಿ ಸಭೆ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಜ. 31, ಫೆ. 1 ಮತ್ತು 2ರಂದು ಈ ಯುವಜನ ಮೇಳ ನಡೆಯಲಿದ್ದು, ರಾಜ್ಯದ ವಿವಿಧೆಡೆಯಿಂದ ಸುಮಾರು 1000 ಮಂದಿ ಆಗಮಿಸುವ ನಿರೀಕ್ಷೆಯಿದೆ. ಇದೇ ಸಂದರ್ಭದಲ್ಲಿ ರಾಜ್ಯ ಯುವಜನ ಪ್ರಶಸ್ತಿ ಪ್ರದಾನವೂ ನಡೆಯಲಿದೆ ಎಂದು ಸಚಿವರು ಹೇಳಿದರು. ಯುವಜನ ಮೇಳದ ಸಂಘಟನೆಗಾಗಿ ವಿವಿಧ ಸಮಿತಿಗಳನ್ನು ಈ ಸಭೆಯಲ್ಲಿ ರಚಿಸಲಾಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಟಿ. ರೇಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಂ.ಬಿ. ಬೋರಲಿಂಗಯ್ಯ, ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ಎ. ಪ್ರಭಾಕರ ಶರ್ಮಾ ಇದ್ದರು. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ ಸ್ವಾಗತಿಸಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.