ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಿಗೆ ಅನುದಾನದಲ್ಲಿ ತಾರತಮ್ಯ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಅಭಿವೃದ್ಧಿ ಕಾಮಗಾರಿಗಳಿಗಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಮಲತಾಯಿ ಧೋರಣೆ ತೋರುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಸರ್ಕಾರ ಹಾಗೂ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕೆ. ಶ್ರೀಧರ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ. ಶ್ರೀಧರ್ರಾವ್ ಹಾಗೂ ನ್ಯಾ. ಅಬ್ದುಲ್ ನಜೀರ್ ಅವರಿದ್ದ ವಿಭಾಗೀಯ ಪೀಠ, ಒಂದು ವಾರದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ಆದೇಶಿಸಿದೆ. ಪ್ರತಿ ವರ್ಷ ವಿವಿಧ ಯೋಜನೆಗಳು, ಕಾಮಗಾರಿಗಳಿಗೆ ಪ್ರತಿ ಜಿಲ್ಲೆಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಲೋಕೋಪಯೋಗಿ ಇಲಾಖೆ ತಾರತಮ್ಯ ಮಾಡುತ್ತಿದೆ. ಹಾಸನ ಹಾಗೂ ಮೈಸೂರು ಜಿಲ್ಲೆಗಳಿಗೆ ಸುಮಾರು ವಾರ್ಷಿಕ 250 ಕೋಟಿಯಷ್ಟು ಅನುದಾನ ದೊರೆಯುತ್ತಿದೆ. ಆದರೆ, ದಕ್ಷಿಣ ಕನ್ನಡ ಜಿಲ್ಲೆಗೆ ಕೇವಲ 31 ಕೋಟಿ ಬಿಡುಗಡೆ ಮಾಡಲಾಗಿದೆ. ಅಲ್ಲದೆ, ಟೆಂಡರ್ ಪ್ರಕ್ರಿಯೆಗಳಿಗೆ ಸಂಬಂಧಿಸಿದ 90 ಕೋಟಿ ಮೊತ್ತವನ್ನು ಇನ್ನು ಇಲಾಖೆ ಬಿಡುಗಡೆ ಮಾಡಿಲ್ಲವಾದ್ದರಿಂದ, ನೂತನ ಟೆಂಡರ್ ಪಡೆಯಲು ಯಾವುದೇ ಸಂಸ್ಥೆಗಳು ಮುಂದೆ ಬರುತ್ತಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.