ಬಂಟ್ವಾಳ; ಬಿಜೆಪಿ ಪ್ರಚಾರ ಅಭಿಯಾನಕ್ಕೆ ವಿಧ್ಯುಕ್ತ ಚಾಲನೆ
ಬಂಟ್ವಾಳ: ಇಲ್ಲಿನ ಪುರಸಭೆಯ ಚುನಾವಣೆಗೆ ಬಿಜೆಪಿ ಪ್ರಚಾರ ಅಭಿಯಾನಕ್ಕೆ ಗುರುವಾರ ಸಂಜೆ ವಿಧ್ಯುಕ್ತ ಚಾಲನೆ ದೊರೆಯಿತು. ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ಸಭಾಂಗಣದಲ್ಲಿ, ಅಭಿಯಾನವನ್ನು ವಿಧಾನಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಹಗರಣಗಳಲ್ಲಿಯೇ ಮುಳುಗಿರುವ ಕಾಂಗ್ರೆಸ್ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಕಾಂಗ್ರೆಸ್ ಸ್ಥಿತಿ ಈಗ ಡೋಲಾಯಮಾನವಾಗಿದ್ದು ಬಂಟ್ವಾಳ ಪುರಸಭೆಯ 23 ವಾರ್ಡ್ಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಾಧ್ಯವಾಗದಿರುವುದು ಅದರ ದುಃಸ್ಥಿತಿ ತೋರಿಸುತ್ತದೆ ಎಂದು ಲೇವಡಿ ಮಾಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಚುನಾವಣಾ ಜಿಲ್ಲಾ ಪ್ರಭಾರಿ ಪ್ರತಾಪ್ ಸಿಂಹ ನಾಯಕ್, ಮಾಜಿ ಶಾಸಕ ರುಕ್ಮಯ ಪೂಜಾರಿ, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಸುಲೋಚನಾ ಭಟ್, ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ತುಂಗಪ್ಪ ಬಂಗೇರ, ಪುರಸಭಾಧ್ಯಕ್ಷ ದಿನೇಶ ಭಂಡಾರಿ, ಮಾಜಿ ಅಧ್ಯಕ್ಷ ಸದಾನಂದ ಮಲ್ಲಿ, ನಗರ ಯೋಜನಾ ಪ್ರಾಧಿಕಾರದ ಅಧಕ್ಷ ಗೋವಿಂದ ಪ್ರಭು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ದೇವದಾಸ್ ಶೆಟ್ಟಿ, ಪುರಸಭಾ ಶಕ್ತಿ ಕೇಂದ್ರದ ಅಧ್ಯಕ್ಷ ಆನಂದ ಕುಲಾಲ್, ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ರತ್ನಕುಮಾರ್ ಚೌಟ ಪಾಲ್ಗೊಂಡರು.
ಪುರಸಭೆಯ ಬಿಜೆಪಿ ಚುನಾವಣಾ ಪ್ರಭಾರಿ ಜಿ.ಆನಂದ ಪ್ರಸ್ತಾವಿಸಿದರು. ಕ್ಷೇತ್ರ ಸಮಿತಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಾಮದಾಸ್ ನಿರೂಪಿಸಿದರು.