ಡಾ. ಉಪ್ಪಂಗಳ ರಾಮ ಭಟ್ಗೆ ಶಂಕರ ಪ್ರಶಸ್ತಿ ಪ್ರದಾನ 9ರಂದು
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ವಿವೇಕಾನಂದ ಕಾಲೇಜಿನ ಶಿವರಾಮ ಕಾರಂತ ಅಧ್ಯಯನ ಕೇಂದ್ರ ಮತ್ತು ಕನ್ನಡ ಸಂಘಗಳ ಆಶ್ರಯದಲ್ಲಿ ಕೊಡಮಾಡುವ ಸಿದ್ದಮೂಲೆ ಶಂಕರನಾರಾಯಣ ಭಟ್ ಸ್ಥಾಪಿತ 'ಶಂಕರ ಸಾಹಿತ್ಯ ಪ್ರಶಸ್ತಿ' ಗೆ ಸಾಹಿತಿ ಡಾ. ಉಪ್ಪಂಗಳ ರಾಮ ಭಟ್ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರಾದ ವಿದ್ಯಾಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ 9 ರಂದು ಕಾಲೇಜಿನಲ್ಲಿ ನಡೆಯಲಿದೆ.
ವಿಶ್ರಾಂತ ಪ್ರಾಧ್ಯಾಪಕ ಡಾ. ತಾಳ್ತಜೆ ವಸಂತ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಸತ್ಯನಾರಾಯಣ ಮಲ್ಲಿಪಟ್ಟಣ ಮುಖ್ಯ ಅತಿಥಿಯಾಗಿ ಆಗಮಿಸುವರು.
ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಬೆಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ ದೀಪಿಕಾ ಬಿ, ದ್ವಿತೀಯ ಸ್ಥಾನ ಗಳಿಸಿದ ಕಾಸರಗೋಡಿನ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿ ದಿವ್ಯಶ್ರೀ ಡಿ. ಹಾಗೂ ತೃತೀಯ ಸ್ಥಾನ ಗಳಿಸಿದ ಮೈಸೂರಿನ ಶಾರದಾ ವಿಲಾಸ ಕಾಲೇಜಿನ ಕಿರಣ್ ಪಿ. ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.