2015ರ ಹೊತ್ತಿಗೆ ಎಲ್ಲ ಜಿಲ್ಲೆಗಳಿಗೂ ಧ.ಗ್ರಾಮಾಭಿವೃದ್ಧಿ ಯೋಜನೆ ವಿಸ್ತರಣೆ
ಶನಿವಾರಸಂತೆ: 2015ರ ಹೊತ್ತಿಗೆ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ಕ್ಷೇತ್ರವನ್ನು ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ವಿಸ್ತರಿಸಲಾಗುವುದೆಂದು ಸೋಮವಾರಪೇಟೆ ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಅಧಿಕಾರಿ ಕೆ. ಚಿದಾನಂದ್ ಹೇಳಿದರು.
ಅವರು ಶನಿವಾರ ವಡೆಯನಪುರದ ಅಂಗನವಾಡಿ ಕೇಂದ್ರದ ಆವರಣದಲ್ಲಿ ಏರ್ಪಡಿಸಿದ್ದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿಡ್ತ ಕಾರ್ಯಕ್ಷೇತ್ರದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘಟನೆಗಳ ಸದಸ್ಯರು ಅವರ ಕುಟುಂಬ ವರ್ಗದವರು ಸ್ವಾವಲಂಭಿಯಾಗಿ ನೆಮ್ಮದಿಯಿಂದ ಬಾಳಬೇಕೆಂಬ ಧ್ಯೇಯೋದ್ದೇಶದಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇಂದು ಸಂಘಟನೆ ಹೆಮ್ಮರವಾಗಿ ಬೆಳೆಯುತ್ತಿದೆ. ಸಂಘದ ಉದ್ದೇಶ ಕೇವಲ ಆರ್ಥಿಕವಾಗಿ ಸಬಲೀಕರಣರಾಗದೆ ಸಮಾಜ ಮುಖೇನ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ. ಸಂಘಟನೆ ಸಮಾಜದ ನಾನಾ ಕ್ಷೇತ್ರಗಳಲ್ಲಿ ಕೈಯಾಡಿಸುತ್ತಿದ್ದು ಕೃಷಿ, ಶಿಕ್ಷಣ, ಮಹಿಳಾ ಸಬಲೀಕರಣ, ಆರೋಗ್ಯ, ನೈರ್ಮಲ್ಯ, ಪರಿಸರ, ಮದ್ಯಪಾನದಂತ ಪಿಡುಗುಗಳ ಕುರಿತು ಸಮಾಜದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿ.ಪಂ. ಸದಸ್ಯ ಡಿ.ಬಿ. ಧರ್ಮಪ್ಪ, ಮಹಿಳೆಯರು ಮಾತ್ರ ಸಬಲೀಕರಣರಾಗದೆ, ಗ್ರಾಮೀಣ ಪ್ರದೇಶಗಳಲ್ಲಿ ರೈತರು, ಬಡ ಕೂಲಿಕಾರ್ಮಿಕರು ಸಬಲೀಕರಣರಾಗುವ ಉದ್ದೇಶದಿಂದ ಅವಶ್ಯಕ ಕಾರ್ಯಕ್ರಮಗಳನ್ನು ಪರಿಚಯಿಸಿ ಎಲ್ಲರೂ ಪ್ರಗತಿ ಹೊಂದಲು ಶ್ರಮಿಸುತ್ತಿದೆ ಎಂದು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ನಿಡ್ತ ಗ್ರಾ.ಪಂ. ಅಧ್ಯಕ್ಷೆ ಲಲಿತಾ ಶಾಂತಪ್ಪ, ಪ್ರಮುಖರಾದ ಪರಮೇಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಶೇಖರ್ ಗೌಡ, ಸೇವಾ ಕಾರ್ಯನಿರತರಾದ ಶೀಲಾ, ದಿವ್ಯಾ ಮುಂತಾದವರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.