ಅರ್ಹ ಮತದಾರರ ಸೇರ್ಪಡೆಗೆ ರಾಜಕೀಯ ಪಕ್ಷಗಳಿಗೆ ಸೂಚನೆ
ಮಂಗಳೂರು: ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಅರ್ಹ ಮತದಾರರು ತೊಡಗಿಸಿಕೊಳ್ಳುವ ಸಲುವಾಗಿ ಅಂಥವ ನೋಂದಣಿಗೆ ಹೆಚ್ಚಿನ ಒತ್ತು ನೀಡುವಂತೆ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಶೇಷ ಸಭೆ ನಡೆಯಿತು.
ಜಿಲ್ಲಾಧಿಕಾರಿ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜಕೀಯ ಪಕ್ಷಗಳ ವಿವಿಧ ಮುಖಂಡರು ಭಾಗವಹಿಸಿದ್ದರು.
ಪೂರ್ವಭಾವಿಯಾಗಿ ಮತದಾರರ ಪಟ್ಟಿ ಪರಿಶೀಲನೆ, ನೋಂದಣಿ ಅವಕಾಶ, ಯಾರ ನೆರವನ್ನು ಪಡೆಯಬೇಕು ಇತ್ಯಾದಿ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿದರು. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯಬೇಕಿದ್ದು, ಸಮಸ್ಯೆ, ಸಲಹೆಗಳಿದ್ದರೆ ಕೇಳಿ ಮುಂದುವರಿಯುವಂತೆ ಸೂಚನೆ ನೀಡಿದರು. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಜಿಲ್ಲೆಯಲ್ಲಿ ಶೇಕಡಾವಾರು ಮತದಾನ ಹೆಚ್ಚಳವಾಗಬೇಕು ಎಂದರು.
ನೀತಿ ಸಂಹಿತೆ ಉಲ್ಲಂಘನೆಯಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ತಾಲೂಕು ಮಟ್ಟದಲ್ಲಿ ಪೊಲೀಸರು ಮತ್ತು ತಹಸೀಲ್ದಾರರು ಸಮನ್ವಯದಿಂದ ಕೆಲಸ ಮಾಡುವಂತೆ ಸೂಚಿಸಲಾಯಿತು. ಆನ್ಲೈನ್ನಲ್ಲಿ ಮತದಾರರ ಪಟ್ಟಿ ಪರಿಶೀಲನೆ ಕುರಿತು ಅಪರ ಜಿಲ್ಲಾಧಿಕಾರಿ ದಯಾನಂದ್ ಮಾಹಿತಿ ನೀಡಿದರು.
ಸಭೆಯಲ್ಲಿ ನಗರ ಪೊಲೀಸ್ ಕಮಿಷನರ್ ಮನೀಷ್ ಕರ್ಭೀಕರ್, ಜಿಲ್ಲಾ ಎಸ್ಪಿ ಅಭಿಷೇಕ್ ಗೋಯಲ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವಿಜಯ ಪ್ರಕಾಶ್, ಪಾಲಿಕೆ ಆಯುಕ್ತ ಡಾ.ಹರೀಶ್ ಕುಮಾರ್ ಹಾಜರಿದ್ದರು.