ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
ಮಂಗಳೂರು: ಮಂಗಳೂರು ಹೊರ ವಲಯದ ವಳಚ್ಚಿಲ್ನಲ್ಲಿ ಮಂಗಳವಾರ ರಾತ್ರಿ ಕಾಂಗ್ರೆಸ್ ಕಾರ್ಯಕರ್ತನಿಗೆ ಎಸ್ಡಿಪಿಐ ಕಾರ್ಯಕರ್ತರು ಚೂರಿಯಿಂದ ಇರಿದು ಹಲ್ಲೆ ನಡೆಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತ, ವಳಚ್ಚಿಲ್ ನಿವಾಸಿ ಜಾಫರ್ ಇರಿತಕೊಳಗಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಸ್ಡಿಪಿಐ ಪಕ್ಷದವರೆನ್ನಲಾದ 4- 5 ಮಂದಿ ಇದ್ದ ತಂಡ ವಳಚ್ಚಿಲ್ನಲ್ಲಿ ಏಕಾಏಕಿ ಜಾಫರ್ ಮೇಲೆರಗಿ ಚೂರಿಯಿಂದ ಇರಿದು ಪರಾರಿಯಾಗಿದೆ. ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಜಾಫರ್ ಪ್ರಚಾರ ಕಾರ್ಯ ನಡೆಸಿದ್ದರು. ಇದೇ ಸಿಟ್ಟಿನಲ್ಲಿ ಎಸ್ಡಿಪಿಐ ಕಾರ್ಯಕರ್ತರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.
ಕೊಡಗಿನಲ್ಲಿ ಪ್ರತಿಬಂಧಕಾಜ್ಞೆ
ಮಡಿಕೇರಿ: ಚುನಾವಣೆಯ ಮತ ಎಣಿಕೆ ಕಾರ್ಯ ಬುಧವಾರ ನಗರದ ಸಂತ ಜೋಸೆಫರ ಶಾಲೆಯಲ್ಲಿ ನಡೆಯಲಿದೆ. ಮತ ಎಣಿಕೆ ನಂತರ ವಿಜಯಿ ಅಭ್ಯರ್ಥಿಗಳ ಬೆಂಬಲಿಗರು ವಿಜಯೋತ್ಸವ, ಮೆರವಣಿಗೆ, ಸಭೆ ಮತ್ತಿತರ ಕಾರ್ಯಕ್ರಮ ಕ್ರಮ ನಡೆಸುವ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಬೇಕಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಬುಧವಾರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲಾಧಿಕಾರಿ ಪ್ರತಿಬಂಧಕಾಜ್ಞೆ ಘೋಷಿಸಿ ಆದೇಶಿಸಿದ್ದಾರೆ.
ಬಸ್ ಡಿಕ್ಕಿ: ಬೈಕ್ ಸವಾರ ಸಾವು
ಬಂಟ್ವಾಳ: ಬಸ್ ಹಾಗೂ ಬೈಕ್ ಡಿಕ್ಕಿಯಾಗಿ ಯುವಕ ದಾರುಣವಾಗಿ ಮೃತಪಟ್ಟ ಘಟನೆ ನರಿಕೊಂಬು ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಶಂಭೂರು ನಿವಾಸಿ ಹರೀಶ್ (28) ಮೃತರು. ಇವರು ತನ್ನ ಮನೆಯಿಂದ ಪಾಣೆಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ನರಿಕೊಂಬು ಸಮೀಪ ಈ ಘಟನೆ ನಡೆದಿದೆ, ಘಟನೆಯ ತೀವ್ರತೆಗೆ ಸವಾರ ಹರೀಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮುಂಬೈನಿಂದ ಬಂದಿದ್ದ: ಮುಂಬೈಯಲ್ಲಿ ಉದ್ಯೋಗದಲ್ಲಿರುವ ಈತ, ಎರಡು ದಿನಗಳ ಹಿಂದೆಯಷ್ಟೇ ಊರಿಗೆ ಬಂದಿದ್ದ, ಈತನ ಸಹೋದರಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಸಂಬಂಧಿ ಕಾಯಿಲೆಯ ಚಿಕಿತ್ಸೆಗೆ ದಾಖಲಾಗಿದ್ದು, ಈ ಕಾರಣದಿಂದ ಹರೀಶ್ ಊರಿಗೆ ಬಂದಿದ್ದ, ಆದರೆ ವಿಧಿಯ ಕ್ರೂರ ಆಟದಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾನೆ.