ಪುತ್ತೂರು: ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಇಂದಿನಿಂದ
ಪುತ್ತೂರು: ಶಾಲೆಯಿಂದ ಹೊರಗುಳಿದ ಮಕ್ಕಳ ರಾಜ್ಯಾದ್ಯಂತ ಸಮೀಕ್ಷೆ ನಡೆಸಲು ಸರ್ಕಾರ ಆದೇಶ ಹೊರಡಿಸಿದ್ದು ಈ ನಿಟ್ಟಿನಲ್ಲಿ ಪುತ್ತೂರಿನಲ್ಲಿ ಸಮೀಕ್ಷೆ ಕಾರ್ಯ ನ.6ರಿಂದ ಪ್ರಾರಂಭಗೊಳ್ಳಲಿದೆ. ನಗರದ ನೆಲ್ಲಿಕಟ್ಟೆ ಶಾಲೆಯಲ್ಲಿ ಶಾಸಕಿ ಶಕುಂತಳಾ ಶೆಟ್ಟಿ ಸಮೀಕ್ಷೆಗೆ ಚಾಲನೆ ನೀಡಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಜಿ.ಎಸ್. ಹೇಳಿದರು.
ಅವರು ಮಂಗಳವಾರ ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೈಕೋರ್ಟ್ನ ನಿರ್ದೇಶನದಂತೆ 2001-02 ಸಾಲಿನಿಂದ 2013-14ನೇ ಸಾಲಿನವರೆಗೆ ಶಾಲೆಯಿಂದ ಹೊರಗುಳಿದ ಮಕ್ಕಳ ನಿಖರವಾದ ಮಾಹಿತಿಯನ್ನು ಪಡೆಯುವ ಉದ್ದೇಶದಿಂದ ನ.6 ಮತ್ತು 7 ಹಾಗೂ ನ.13ರಿಂದ 17ರವರೆಗೆ ಸಮೀಕ್ಷಾ ಕಾರ್ಯ ನಡೆಸಲಾಗುವುದು. ತಾಲೂಕಿನಾದ್ಯಂತ 20 ಕ್ಲಸ್ಟರ್ಗಳಿದ್ದು ಈ ಪೈಕಿ 12 ಕ್ಲಸ್ಟರ್ ವಲ್ನರೇಬಲ್, 4 ಕ್ಲಸ್ಟರ್ಗಳು ನಾನ್ವಲ್ನರೇಬರ್ ಮತ್ತು 4 ಕ್ಲಸ್ಟರ್ಗಳು ಸಾಮಾನ್ಯ ಎಂದು ಗುರುತಿಸಲಾಗಿದೆ.
ನ. 6 ರಂದು ನೆಲ್ಲಿಕಟ್ಟೆ ಶಾಲೆಯಲ್ಲಿ ಸಮೀಕ್ಷಾ ಕಾರ್ಯಕ್ಕೆ ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ ಅವರು ಈ ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷೆ ವಾಣಿ ಶ್ರೀಧರ್, ತಾ.ಪಂ. ಅಧ್ಯಕ್ಷೆ ಶಶಿಪ್ರಭಾ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.