ಶ್ರದ್ಧಾಕೇಂದ್ರ ತೇಜೋವಧೆಗೆ ಖಂಡನೆ
ಮಂಗಳೂರು: ಸೌಜನ್ಯ ಕೊಲೆ ಪ್ರಕರಣವನ್ನು ಮುಂದಿಟ್ಟುಕೊಂಡು ಧಾರ್ಮಿಕ ಶ್ರದ್ಧಾ ಕೇಂದ್ರ ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ತೇಜೋವಧೆ ಮಾಡುತ್ತಿರುವುದನ್ನು ಕಲ್ಕೂರ ಪ್ರತಿಷ್ಠಾನ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಖಂಡಿಸಿದ್ದಾರೆ.
ಸೌಜನ್ಯ ಕೊಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಕ್ಷಣವೇ ತಪ್ಪಿತಸ್ಥರನ್ನು ಪತ್ತೆಹಚ್ಚುವ ಮೂಲಕ ಸಾರ್ವಜನಿಕರಲ್ಲಿ ಉಂಟಾಗಿರುವ ಗೊಂದಲವನ್ನು ನಿವಾರಿಸಲೇಬೇಕು ಎಂದು ಆಗ್ರಹಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಿಐಡಿ ಅಥವಾ ಸಿಬಿಐ ತನಿಖೆಯಾದರೂ ಆಕ್ಷೇಪದ ಪ್ರಶ್ನೆ ಉದ್ಭವಿಸುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಇಂಥ ಅಮಾನವೀಯ ಘಟನೆಗಳನ್ನು ಸೂಕ್ತ ಕಾನೂನು ರೀತಿಯಲ್ಲಿ ಪರಿಹರಿಸಿ ನ್ಯಾಯ ಒದಗಿಸುವಲ್ಲಿ ಪೊಲೀಸ್ ಇಲಾಖೆ, ನ್ಯಾಯಾಲಯ ಹಾಗೂ ಸರ್ಕಾರ ಮುಂದಾಗಬೇಕು.
ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಡಾ.ಹೆಗ್ಗಡೆ ವಿರುದ್ಧದ ಹೇಳಿಕೆಗಳು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟವರಿಗೆ ದಿಗ್ಭ್ರಮೆ ತರುವಂತಿದೆ. ಮುಗ್ಧ ಜನರ ಭಾವನೆಯನ್ನು ದಾರಿತಪ್ಪಿಸುವ ಸ್ವರೂಪದಲ್ಲಿದೆ. ಆದ್ದರಿಂದ ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸುವಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ಕಲ್ಕೂರ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.