ಇಂದು ಬೀದಿಬದಿ ವ್ಯಾಪಾರಸ್ಥರ ಪ್ರತಿಭಟನೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಫೆ.3ರಂದು ಬೆಳಗ್ಗೆ 10 ಗಂಟೆಗೆ ಬೀದಿಬದಿ ವ್ಯಾಪಾರಸ್ಥರ ಸಂಘ ಪಾಲಿಕೆ ಮುಂಭಾಗ ಧರಣಿ ನಡೆಸಲಿದೆ.
ಕಳೆದ ಬಿಜೆಪಿ ಆಡಳಿತಾವಧಿಯಲ್ಲಿ ಬೀದಿಬದಿ ವ್ಯಾಪಾರಸ್ಥರ ಮೇಲೆ ಟೈಗರ್ ಕಾರ್ಯಾಚಾರಣೆ ಹೆಸರಿನಲ್ಲಿ ಗಂಭೀರ ಸ್ವರೂಪದ ದಾಳಿ ನಡೆಸಿತ್ತು. ನಂತರ ಮನಪಾ ಸಾಮಾನ್ಯ ಸಭೆಯಲ್ಲಿ ಬೀದಿಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಒಪ್ಪಿಗೆ ನೀಡಲಾಗಿತ್ತು.
ಆದರೆ, ಈಗ ಮನಾಪ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂದು ಸಂಘದ ಅಧ್ಯಕ್ಷ ಮಹಮ್ಮದ್ ಮುಸ್ತಾಫ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.
ಆರ್ಟಿಇ ಪ್ರವೇಶಾತಿ- ನೇರ ಫೋನ್ ಇನ್
ಮಂಗಳೂರು: 2014- 15ನೇ ಶೈಕ್ಷಣಿಕ ಸಾಲಿನಲ್ಲಿ ಆರ್ಟಿಇ ಶಿಕ್ಷಣ ಹಕ್ಕು ಕಾಯ್ದೆಯಡಿಯಲ್ಲಿ ಅನುದಾನ ರಹಿತ, ಸಿಬಿಎಸ್ಇ ಶಾಲೆಗಳಲ್ಲಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಉಚಿತ ಸೀಟುಗಳು ಲಭ್ಯವಿದೆ. ಸಾರ್ವಜನಿಕರಿಗೆ ಈ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಪ್ರವೇಶಕ್ಕೆ ಅನುಸರಿಸಬೇಕಾದ ವಿಧಿ-ವಿಧಾನಗಳ ಕುರಿತು 3 ರಂದು ರಾತ್ರಿ 9.30- 10.30ರವರೆಗೆ ಆಕಾಶವಾಣಿಯಲ್ಲಿ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಸೆಸ್ ಜಯಶೇಖರ್, ಮಂಗಳೂರು ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ ಸಿ. ಲೋಕೇಶ್ ಪಾಲ್ಗೊಳ್ಳಲಿದ್ದಾರೆ. ಅವರನ್ನು ದೂ. 0824- 2211391, 2211392, 2211999 ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.