ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಇಂದು ಪ್ರತಿಭಟನೆ
ಸುಳ್ಯ: ಪರಿಶಿಷ್ಟ ಜಾತಿ, ಪಂಗಡದವರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫೆ. 3ರಂದು ಸುಳ್ಯ ತಾಲೂಕು ಕಚೇರಿಯೆದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಯ ಮುಖಂಡ ಅಚ್ಚುತ ಗುತ್ತಿಗಾರು ತಿಳಿಸಿದ್ದಾರೆ.
ಸುಳ್ಯ ತಾಲೂಕು ಪರಿಶಿಷ್ಟ ಜಾತಿಯವರ ಮೀಸಲು ಕ್ಷೇತ್ರವಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿ ಶೂನ್ಯವಾಗಿದೆ ಎಂದರು.
ಹಲವಾರು ಗ್ರಾಮಗಳಲ್ಲಿ ಹಕ್ಕು ಪತ್ರ ಮತ್ತು ಮೂಲ ಸೌಕರ್ಯ ಇಲ್ಲ. ತಾಲೂಕು ಕಚೇರಿಯಲ್ಲಿ ಅಕ್ರಮ ಸಕ್ರಮ ಅರ್ಜಿಗಳು ತನಿಖೆಯಾಗದೆ ಪರಿಶಿಷ್ಟ ಜಾತಿ, ಪಂಗಡದವರು ಸರ್ಕಾರದ ಸೌಲಭ್ಯ ಪಡೆಯಲು ಅಸಮರ್ಥರಾಗಿದ್ದಾರೆ ಎಂದು ಹೇಳಿದರು.
ಇಲ್ಲಿನ ಶಾಸಕರು ಮತ್ತು ಅಧಿಕಾರಿ ವರ್ಗದವರು ನಮ್ಮ ಸಮಸ್ಯೆಯನ್ನು ಬಗೆಹರಿಸಲು ವಿಫಲರಾಗಿದ್ದಾರೆ. ಇದನ್ನು ವಿರೋಧಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.