ಅತಿವೃಷ್ಠಿ ಹಾನಿಗೆ ತಲಾ 5 ಕೋಟಿ ಅನುದಾನಕ್ಕೆ ಮನವಿ
ಮಂಗಳೂರು: ದ.ಕ.ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಅತಿವೃಷ್ಠಿಯಿಂದ ಪ್ರಮುಖ ಸಂಚಾರಿ ರಸ್ತೆ ಹಾಗೂ ಸಂಪರ್ಕ ಸೇತುವೆಗಳು ಹಾನಿಗೀಡಾಗಿದ್ದು, ವಾಹನ ಮತ್ತು ಸಾರ್ವಜನಿಕರ ಸಂಚಾರಕ್ಕೆ ಅನಾನುಕೂಲವಾಗಿದೆ. ಆದ್ದರಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ರು. 5 ಕೋಟಿ ವಿಶೇಷ ಅನುದಾನ ನೀಡಬೇಕು. ರೈತರ ಹಿತದೃಷ್ಟಿಯಿಂದ ಪಶ್ಚಿಮವಾಹಿನಿ ಯೋಜನೆ ಕೈಗೆತ್ತಿಕೊಳ್ಳಲು ಪೂರಕ ಬಜೆಟ್‌ನಲ್ಲಿ ಅನುದಾನ ಒದಗಿಸುವಂತೆ ಗುರುವಾರ ಬೆಂಗಳೂರಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಜಿಲ್ಲೆಯ ಸಚಿವರು, ಶಾಸಕರು ವಿನಂತಿಸಿದ್ದಾರೆ.
ತಮ್ಮನ್ನು ಭೇಟಿ ಮಾಡಿದ ನಿಯೋಗದ ಮನವಿಗೆ ಮುಖ್ಯಮಂತ್ರಿ ಸ್ಪಂದಿಸಿದ್ದು, ಪೂರಕ ಬಜೆಟ್‌ನಲ್ಲಿ ಅನುದಾನ ಒದಗಿಸುವ ಭರವಸೆ ನೀಡಿದರು.
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ನೇತೃತ್ವದ ನಿಯೋಗದಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್, ಶಾಸಕರಾದ ಜೆ.ಆರ್.ಲೋಬೋ, ಮೊಯ್ದಿನ್ ಬಾವಾ, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಎಲ್ಲ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಆಗ್ರಹಿಸಿದರು.