ಲೋಕಸಭೆ ಚುನಾವಣೆಗೆ ಸಿದ್ಧಗೊಳ್ಳಲು ಅಧಿಕಾರಿಗಳಿಗೆ ಸೂಚನೆ
ಮಂಗಳೂರು: 'ಮುಂಬರುವ ಲೋಕಸಭೆ ಚುನಾವಣೆಯು ದ.ಕ. ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆಯಲು ತಕ್ಷಣದಿಂದಲೇ ಸಿದ್ದರಾಗಿರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಚುನಾವಣಾ ಪೂರ್ವಸಿದ್ಧತೆಗಳ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.
ಮತದಾರರ ಪಟ್ಟಿಯಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಕ್ರಮ ವಹಿಸಬೇಕು. ಮುಖ್ಯವಾಗಿ ಮತದಾರರ ಹೆಸರು ಸೇರ್ಪಡೆ ಮತ್ತು ಆಕ್ಷೇಪಣೆಗಳಿಗೆ ಸಂಬಂಧಿಸಿದಂತೆ ಬಂದ ಅರ್ಜಿಗಳನ್ನು ಆದ್ಯತೆಯಲ್ಲಿ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಬೇಕು.
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣೆಗೆ ಸಂಬಂಧಪಟ್ಟ ಅಧಿಕಾರಿಗಳು ಪರಸ್ಪರ ನಿರಂತರ ಸಂಪರ್ಕವಿರಿಸಿಕೊಂಡು, ವ್ಯವಸ್ಥಿತ ರೀತಿಯಲ್ಲಿ ಸಿದ್ದತೆಗಳನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು.
ಚುನಾವಣಾ ಭದ್ರತಾ ಸಿದ್ಧತೆಗಳಿಗಾಗಿ ಪೊಲೀಸ್ ಇಲಾಖೆ ಮತ್ತು ಚುನಾವಣಾ ಸಂಬಂಧಪಟ್ಟ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯಾಚರಿಸಬೇಕು. ದಂಡಾಧಿಕಾರಿಗಳ ನೇಮಕ, ತಪಾಸಣಾ ಸ್ಕ್ವಾಡ್‌ಗಳ ನೇಮಕ, ವಿಕ್ಷಣಾ ತಂಡ, ವೀಡಿಯೋ ಚಿತ್ರೀಕರಣ ತಂಡ, ವೀಕ್ಷಣಾ ತಂಡಗಳ ನೇಮಕವನ್ನು ಕೂಡಲೇ ಪೂರ್ತಿಗೊಳಿಸುವಂತೆ ಸೂಚಿಸಿದರು.
ಚುನಾವಣಾ ಅವಧಿಯಲ್ಲಿ ಜಿಲ್ಲಾ ಮತ್ತು ಅಂತರ್‌ರಾಜ್ಯ ಗಡಿ ಪ್ರದೇಶಗಳಲ್ಲಿ ತಪಾಸಣೆ ತೀವ್ರಗೊಳಿಸಬೇಕು. 24 ಗಂಟೆಗಳಲ್ಲೂ ಕಾರ್ಯಾಚರಿಸುವಂಥ ಕಂಟ್ರೋಲ್ ರೂಮ್ ಸ್ಥಾಪಿಸಿ, ಸಾರ್ವಜನಿಕರ ದೂರುಗಳಿಗೆ ತಕ್ಷಣವೇ ಸ್ಪಂದಿಸುವಂತಾಗಬೇಕು ಎಂದರು.
ಚುನಾವಣಾ ಅಭ್ಯರ್ಥಿಗಳ ಖರ್ಚುವೆಚ್ಚಗಳ ಮೇಲೆ ನಿಗಾವಹಿಸಲು ಲೆಕ್ಕಪತ್ರ ತಂಡವನ್ನು ಸಮರ್ಥಗೊಳಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಆದಾಯ ತೆರಿಗೆ ಇಲಾಖೆ, ಬ್ಯಾಂಕಿಂಗ್ ಅಧಿಕಾರಿಗಳನ್ನು ನಿಯೋಜಿಸಲಾಗುವುದು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ. ದಯಾನಂದ, ಮಂಗಳೂರು ಉಪವಿಭಾಗಾಧಿಕಾರಿ ಡಾ. ಪ್ರಶಾಂತ್, ಪುತ್ತೂರು ಉಪವಿಭಾಗಾಧಿಕಾರಿ ಕೃಷ್ಣಮೂರ್ತಿ, ಡಿಸಿಪಿ ಜಗದೀಶ್, ಎಎಸ್ಪಿ ಶಿವಕುಮಾರ್, ಜಿಲ್ಲೆಯ ಎಲ್ಲ ತಹಸೀಲ್ದಾರ್‌ಗಳು, ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ಇದ್ದರು.