ಪ್ರತಿಭಟನೆ, ಧಿಕ್ಕಾರ, ಲಾಠಿ ಪ್ರಹಾರ, ಬಂಧನ
ಮಂಗಳೂರು: ಬೀದಿ ಬದಿ ವ್ಯಾಪಾರಸ್ಥರು ಅನಧಿಕೃತವಾಗಿ ಕೇಂದ್ರ ಮಾರುಕಟ್ಟೆ ಪರಿಸರದಲ್ಲಿ ವ್ಯಾಪಾರ ಮಾಡುವುದನ್ನು ವಿರೋಧಿಸಿ ಕೇಂದ್ರ ಮಾರುಕಟ್ಟೆ ವ್ಯಾಪಾರಸ್ಥರ ಸಂಘ ಶನಿವಾರ ಪ್ರತಿಭಟನೆ ನಡೆಸಿತು. ಇದಕ್ಕೆ ಪ್ರತಿಯಾಗಿ ಬೀದಿ ಬದಿ ವ್ಯಾಪಾರಸ್ಥರ ಸಂಘಟನೆ ಪ್ರತಿನಿಧಿಗಳು ಧಿಕ್ಕಾರ ಕೂಗಿದಾಗ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿ, ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಘೋಷಣೆ ಕೂಗಿದವರನ್ನು ಬಂಧಿಸಿದರು.
ಕೇಂದ್ರ ಮಾರುಕಟ್ಟೆ ಸುತ್ತಮುತ್ತ ಬೀದಿ ಬದಿ ವ್ಯಾಪಾರಸ್ಥರು ನಿಯಮಬಾಹಿರವಾಗಿ ವ್ಯಾಪಾರ ಮಾಡುತ್ತಿದ್ದಾರೆ. ಇದಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಕೇಂದ್ರ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದರು.
ಧಿಕ್ಕಾರ, ಲಾಠಿಪ್ರಹಾರ: ಅಷ್ಟರಲ್ಲಿ ಸಿಐಟಿಯು ಮುಖಂಡರ ನೇತೃತ್ವದಲ್ಲಿ ಬೀದಿ ಬದಿ ವ್ಯಾಪಾರಸ್ಥರು, ಕಾರ್ಮಿಕರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಧಿಕ್ಕಾರ ಕೂಗಿದರು. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ತಲೆದೋರಿತು. ಬೀದಿ ಬದಿ ವ್ಯಾಪಾರಸ್ಥರು ನ್ಯಾಯಯುತ ವ್ಯಾಪಾರ ನಡೆಸುತ್ತಿದ್ದಾರೆ. ಅವರ ವಿರುದ್ಧ ಪ್ರತಿಭಟನೆ ನಡೆಸುವ ಔಚಿತ್ಯವನ್ನು ಪ್ರಶ್ನಿಸಿದರು. ದಿಢೀರನೆ ನಡೆದ ಈ ಬೆಳವಣಿಗೆಯಿಂದ ಕೇಂದ್ರ ಮಾರುಕಟ್ಟೆ ವ್ಯಾಪಾರಸ್ಥರು ವಿಚಲಿತರಾದರು. ಕೂಡಲೇ ಪೊಲೀಸರು ಮಧ್ಯ ಪ್ರವೇಶಿಸಿ ಧಿಕ್ಕಾರ ಕೂಗುತ್ತಿದ್ದವರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು. ಬಳಿಕ 28ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ತೆಗೆದುಕೊಂಡು ಬಂಧಿಸಿ ಬಿಡುಗಡೆ ಮಾಡಲಾಯಿತು.