ಮತದಾರರ ಜಾಗೃತಿ ಜಾಥಾ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ, ಕಾರವಾರ, ಮಾ. 25
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಂಗಳವಾರ ಆಯೋಜಿಸಲಾಗಿದ್ದ ಮತದಾರರ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎಂ.ಟಿ. ರೇಜು ಉದ್ಘಾಟಿಸಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಾಥಾಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿದ ಅವರು, ಎಲ್ಲರೂ ಶಾಂತಿಯುತವಾಗಿ ಮತದಾನ ಮಾಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಶೇ. 100ರಷ್ಟು ಮತದಾನ ಮಾಡಲು ಬೇಕಾದ ಮೂಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಆದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಮತದಾನದ ಪ್ರಮಾಣ ಕೇವಲ ಶೇ. 60ರಷ್ಟಿದೆ. ವಿಧಾನಸಭೆ ಚುನಾವಣೆಯಲ್ಲಿ ಇದರ ಪ್ರಮಾಣ ಹೆಚ್ಚಾಗಿದ್ದರೂ, ಇನ್ನೂ ಬಹಳಷ್ಟು ಮಂದಿ ಮತದಾನ ಹಕ್ಕು ಚಲಾಯಿಸಲು ಮುಂದೆ ಬರುತ್ತಿಲ್ಲ. ಶೇ. 20ರಷ್ಟು ಮತಗಟ್ಟೆಗಳಲ್ಲಿ ಶೇ. 50ಕ್ಕೂ ಕಡಿಮೆ ಮತದಾನ ಕಳೆದ ಚುನಾವಣೆಯಲ್ಲಿ ದಾಖಲಾಗಿದೆ ಎಂದರು. ಕಡಿಮೆ ಮತದಾನ ಆಗಿರುವ ಮತಗಟ್ಟೆ ಪ್ರದೇಶಗಳಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಬೇಕಾಗಿದೆ. ಮತದಾನ ಪವಿತ್ರ ಕಾರ್ಯವಾಗಿದ್ದು, ಇದನ್ನು ಅರ್ಹರಿಗೆ ಚಲಾಯಿಸುವ ಮೂಲಕ ದೇಶನಿರ್ಮಾಣದ ಕಾರ್ಯದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ ಎಂದು ಮನವಿ ಮಾಡಿದರು. ಜಾಥಾ ಜಿಲ್ಲಾಧಿಕಾರಿ ಕಚೇರಿಯಿಂದ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸಫಲವಾಯಿತು. ಮೆರವಣಿಯಲ್ಲಿ ನೂರಾರು ಸಂಖ್ಯೆಯಲ್ಲಿ ಶಿಕ್ಷಕರು ಭಾಗವಹಿಸಿದ್ದು ವಿಶೇಷವಾಗಿತ್ತು. ಪ್ರತಿಯೊಬ್ಬರ ಮತ ಅಮೂಲ್ಯವಾಗಿದ್ದು, ಅರ್ಹರಿಗೆ ಅದನ್ನು ನೀಡಿ ಮುಂತಾದ ಜಾಗೃತಿ ಘೋಷಣಾ ಫಲಕಗಳು ಗಮನ ಸೆಳೆದವು. ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಸಂಗೀತಾ ಭಟ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರೇವಣಸಿದ್ಧಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಕಾಂತ ಹೆಗಡೆ, ತಹಸೀಲ್ದಾರ್ ಕೊಟ್ರೇಶ ಮತ್ತಿತರರು ಉಪಸ್ಥಿತರಿದ್ದರು.