22ರಂದು ಮಂತ್ರಾಲಯ ಸ್ವಾಮೀಜಿಗೆ ಪೌರ ಸನ್ಮಾನ
ಮಂಗಳೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧೀಶರಾದ ಶ್ರಿ ಸುಬುಧೇಂದ್ರತೀರ್ಥ ಸ್ವಾಮೀಜಿ ಮಂಗಳೂರಿಗೆ ಆಗಮಿಸಲಿದ್ದಾರೆ. ಮೇ 22ರಂದು ಪುರಭವನದಲ್ಲಿ ನಾಗರಿಕರ ಪರವಾಗಿ ಸನ್ಮಾನಿಸಲಾಗುವುದು ಎಂದು ಕಲ್ಕೂರ ಪ್ರತಿಷ್ಠಾನದ ಎಸ್. ಪ್ರದೀಪ್‌ಕುಮಾರ್ ಕಲ್ಕೂರ ತಿಳಿಸಿದ್ದಾರೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸ್ವಾಮೀಜಿಗೆ ಗೌರವ ಸಮರ್ಪಿಸಲಿದ್ದಾರೆ. ಸ್ವಾಮೀಜಿ ಪೌರ ಸನ್ಮಾನ ಕುರಿತು ಮೇ 19ರಂದು ಸೋಮವಾರ ಸಂಜೆ 5 ಗಂಟೆಗೆ ಶರವು ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಮಾಲೋಚನೆ ಸಭೆ ಕರೆಯಲಾಗಿದೆ. ಧಾರ್ಮಿಕ ಕ್ಷೇತ್ರದ ಪ್ರಮುಖರು ಸಭೆಗೆ ಆಗಮಿಸಿ ಸಲಹೆ ಸೂಚನೆ ನೀಡುವಂತೆ ಕಲ್ಕೂರ ವಿನಂತಿಸಿದ್ದಾರೆ.
ಪದವಿ ಪ್ರವೇಶ ಇಂದು ಕೊನೆ
ಮಂಗಳೂರು: ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಪ್ರಥಮ ಪದವಿ ತರಗತಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಬಿಎ, ಬಿಎಸ್‌ಸಿ, ಬಿಕಾಂ, ಬಿಬಿಎಂ ತರಗತಿಗೆ ಪ್ರವೇಶ ಪಡೆಯಲಿಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಮೇ19ರೊಳಗೆ ಸಲ್ಲಿಸಬಹುದು ಎಂದು ಪ್ರಾಂಶುಪಾಲ ಡಾ.ಸತ್ಯನಾರಾಯಣ ಮಲ್ಲಿಪಟ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶೇ.ನೂರು ಫಲಿತಾಂಶ
ಮಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ಶಾಲೆ ಶೇ.ನೂರು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 40 ವಿದ್ಯಾರ್ಥಿಗಳಲ್ಲಿ 8 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 31 ಮಂದಿ ಪ್ರಥಮ, ಓರ್ವ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.