ದಾಖಲೆ ನೀಡದ್ದರಿಂದ ವಿದ್ಯಾರ್ಥಿ ವೇತನ ವಾಪಸ್
ಚನ್ನಗಿರಿ: ತಾಲೂಕಿನಲ್ಲಿ ನಡೆಯುವ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚಿನ ಫಲಿತಾಂಶ ಬರುವಂತೆ ವಿದ್ಯಾರ್ಥಿಗಳನ್ನು ತಯಾರು ಮಾಡಬೇಕು ಎಂದು ತಾಪಂ ಅಧ್ಯಕ್ಷರಾದ ಕಗತೂರು ಪಾಲಾಕ್ಷಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಆರ್. ತಿಪ್ಪೇಶಪ್ಪ ಅವರಿಗೆ ತಾಕೀತು ಮಾಡಿದರು.
ಇಲ್ಲಿನ ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬರುವ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳನ್ನು ಹೇಗೆ ತಯಾರು ಮಾಡಿದ್ದೀರಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಪ್ರಶ್ನಿಸಿದರು.
ಸರಣಿ ಪರೀಕ್ಷೆ: ಈ ಬಗ್ಗೆ ಮಾಹಿತಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಉತ್ತಮ ಫಲಿತಾಂಶ ಬರುವ ನಿಟ್ಟಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಈಗಾಗಲೇ ಶಾಲಾ ಮಟ್ಟದಲ್ಲಿ ಸರಣಿ ಪರೀಕ್ಷೆ ಹಾಗೂ ವಿಶೇಷ ತರಗತಿ ನಡೆಸುತ್ತಾ ಶೇ.90ರಷ್ಟು ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ತಾಲೂಕಿನ ಎಲ್ಲಾ ಪ್ರೌಢಶಾಲಾ ಶಿಕ್ಷಕರು, ವಿದ್ಯಾರ್ಥಿಗಳನ್ನು ತಯಾರು ಮಾಡುತ್ತಿದ್ದಾರೆ, ದಾವಣಗೆರೆ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನ ಪಡೆಯುತ್ತೇವೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು.
ಸಮಾಜ ಕಲ್ಯಾಣಾಧಿಕಾರಿ ಹಟ್ಯಪ್ಪ ಮಾಹಿತಿ ನೀಡಿ, ತಾಲೂಕಿನಲ್ಲಿ ಪರಿಶಿಷ್ಟ ಜಾತಿ- ಪಂಗಡಗಳ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಹಣ ವಾಪಸ್ ಹೋಗುತ್ತಿದೆ ಎಂದು ತಿಳಿಸಿ, 16,701 ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ್ದರೂ, ಸೂಕ್ತ ದಾಖಲಾತಿ ನೀಡದೆ ಲಕ್ಷಾಂತರ ರೂಪಾಯಿ ಸರ್ಕಾರಕ್ಕೆ ವಾಪಸ್ ಆಗುತ್ತಿದೆ ಎಂದರು.
ಮೀನುಗಾರಿಕೆ ಇಲಾಖೆ ಅಧಿಕಾರಿ ಮಾಹಿತಿ ನೀಡಿ, ನಿವೇಶನ ಇದ್ದು ಮನೆಗಳಿಲ್ಲದೆ ಇರುವ 25ಜನ ಫಲಾನುಭವಿಗಳಿಗೆ ಸರ್ಕಾರ ಮನೆ ನೀಡಲು ನಿರ್ಧರಿಸಿದ್ದು, ಒಬ್ಬ ಫಲಾನುಭವಿಗೆ ತಲಾ ರು. 60,000 ದಂತೆ ನೀಡಲಾಗುತ್ತದೆ. ಸರ್ಕಾರದ ನಿಯಮಾವಳಿ ಪ್ರಕಾರ ಫಲಾನುಭವಿಗಳನ್ನು ಆಯ್ಕೆಮಾಡಲಾಗುವುದು ಎಂದು ಹೇಳಿದರು.
ಕಟ್ಟುನಿಟ್ಟಿನ ಕ್ರಮ: ಕಾರ್ಮಿಕ ಇಲಾಖೆ ಅಧಿಕಾರಿ ಫೈರೋಜ್ ಪಾಶಾ ಮಾತನಾಡಿ, ಬಾಲಾ ಕಾರ್ಮಿಕರನ್ನು ಕೆಲಸಕ್ಕೆ ಇಟ್ಟುಕೊಳ್ಳದಂತೆ ಕಾರ್ಯಾಚರಣೆ ನಡೆಸುತ್ತಿದ್ದು, ವಾಣಿಜ್ಯ ವ್ಯವಹಾರ ನಡೆಸುವ ಅಂಗಡಿಯವರು ಭಾನುವಾರಗಳಂದು ರಜಾ ಮಾಡಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊತ್ತೇನೆ ಎಂದು ತಿಳಿಸುಸಿ ಅಂಗಡಿಗಳ ಮೇಲೆ ಇಂಗ್ಲೀಷ್ ಬೋರ್ಡ್ಗಳನ್ನು ತೆಗೆಸುತ್ತಿರುವುದಾಗಿ ವಿವರ ನೀಡಿದರು.
ಸಭೆಯಲ್ಲಿ ಎಲ್ಲಾ ಇಲಾಖೆಗಳ ಪ್ರಗತಿಯ ವಿವರಗಳನ್ನು ಅಧಿಕಾರಿಗಳು ವರದಿ ಮಂಡಿಸಿದರು, ಸಭೆಯಲ್ಲಿ ಉಪಾಧ್ಯಕ್ಷೆ ಲಲಿತಾ ಪುಟ್ಟಸ್ವಾಮಿ, ಸ್ಥಾಯಿ ಸಮಿತಿ ಅದ್ಯಕ್ಷ ಶಿವಕುಮಾರ್, ಕಾರ್ಯನಿರ್ವಹಣಾಧಿಕಾರಿ ಶಿವಕುಮಾರ್ ಹಾಜರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.