ಮಹಿಳೆಯರು ಶಿಕ್ಷಣಕ್ಕೆ ಒತ್ತು ನೀಡಲಿ
ಕ.ಪ್ರ ವಾರ್ತೆ, ಹೊನ್ನಾಳಿ, ಮಾ.8
ಮಹಿಳೆಯ ರಕ್ಷಣೆಗಾಗಿಯೇ ಅನೇಕ ಕಾನೂನುಗಳಿದ್ದು ಮಹಿಳೆಯರು ಧೈರ್ಯಗುಂದದೆ ಅಂತಹ ಕಾನೂನುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ನ್ಯಾಯಾಧೀಶ ರವೀಂದ್ರ ಎಲ್. ಹೊನೊಲೆ ಹೇಳಿದರು.
ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಜಾಗೃತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಶಿಕ್ಷಣ ಜ್ಞಾನದ ಹೆಬ್ಬಾಗಿಲಾಗಿದ್ದು ಮಹಿಳೆಯರು ಶಿಕ್ಷಣ ಪಡೆಯುವ ಮೂಲಕ ವಿವಿಧ ಕ್ಷೇತ್ರಗಳಲ್ಲಿ ಸ್ವಾವಲಂಬಿಗಳಾಗಿ ಆರ್ಥಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಪುರಷರಿಗೆ ಸಮಾನವಾಗಿ ಸಾಧನೆ ಮಾಡುವ ಮೂಲಕ ದೌರ್ಜನ್ಯಗಳಿಂದ ಮುಕ್ತರಾಗಬಹುದಾಗಿದೆ ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಸಿ. ಮಲ್ಲಿಕಾರ್ಜುನ್ ಮಾತನಾಡಿ, ಹೆಣ್ಣು ಭ್ರೂಣ ಹತ್ಯೆಯಂತಹ ಸಾಮಾಜಿಕ ಪಿಡುಗನ್ನು ತೊಡೆದು ಹಾಕಬೇಕಾದರೆ ಹೆಣ್ಣುಮಕ್ಕಳು ಹೆಚ್ಚು ವಿದ್ಯಾವಂತರಾಗಬೇಕು ಎಂದು ಹೇಳಿದರು.
ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಿ: ಇತ್ತೀಚಿನ ದಿನಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹಿಳೆಯರು ಕೂಡ ಪುರುಷರ ಸಮಾನ ರಾಜಕೀಯ ಕ್ಷೇತ್ರಗಳಲ್ಲಿ ಅವಕಾಶಗಳು ಇದ್ದರೂ ಅಧಿಕಾರಸ್ಥ ಮಹಿಳೆಯರ ಪರವಾಗಿ ಅವರ ಗಂಡಂದಿರೇ ಅಧಿಕಾರ ನಡೆಸುವ ಸಂದರ್ಭಗಳು ಸಾಮಾನ್ಯವಾಗುತ್ತಿವೆ. ಇದು ತೊಲಗಬೇಕು ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಅನಂತರಾಜ್ ಶೆಟ್ಟಿ ಮಾತನಾಡಿ, ಪುರುಷ ಪ್ರಧಾನ ಸಮಾಜವೆಂದು ಹೇಳಲಾಗುತ್ತಿದ್ದರೂ ಕೂಡ ಈ ದೇಶದ ಇತಿತಹಾಸದಲ್ಲಿ ಮಹಿಳೆಯರು ಹಲವಾರು ಕ್ಷೇತ್ರಗಳಲ್ಲಿ ಅಸಮಾನ್ಯ ಸಾಧನೆ ಮಾಡುವ ಮೂಲಕ ಅಜರಾಮರವಾಗಿ ಉಳಿದಿದ್ದಾರೆ. ಸಾಧನೆಗೆ ಲಿಂಗ ಅಡ್ಡಿಯಾಗಬಾರದು ಎಂದು ಹೇಳಿದರು.
ಸಮಾರಂಭದಲ್ಲಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಬಿ. ಯತಿರಾಜ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ. ಚನ್ನೇಶ್, ಅಕ್ಷರದಾಸೋಹ ತಾಲೂಕು ಸಹಾಯಕ ನಿರ್ದೇಶಕ ಮೈಸೂರು ಭರಮಪ್ಪ ಮಾತನಾಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಅರೋಗ್ಯಾಧಿಕಾರಿ ಡಾ. ಕೆಂಚಪ್ಪ ಬಂತಿ, ಡಾ. ಲತಾದೇವಿ, ಸಿಡಿಪಿಓ ರಾಮಲಿಂಗಪ್ಪ, ಎಸಿಡಿಪಿಓ ರಷೀದ್ದುನ್ನೀಸಾ, ಉಪನ್ಯಾಸಕ ಬಸವರಾಜ ಮುಂತಾದವರು ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.