ಜಗಳೂರು: ಕುಡಿಯುವ ನೀರಿನ ತೀವ್ರ ಅಭಾವ ತಲೆದೋರಿದ ಹಿನ್ನೆಲೆಯಲ್ಲಿ ಸಮರ್ಪಕವಾಗಿ ನೀರು ಪೂರೈಸಲು ಒತ್ತಾಯಿಸಿ ತಾಲೂಕಿನ ಬಿಳಿಚೋಡು ಗ್ರಾಪಂ ಕಚೇರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ಬುಧವಾರ ನಡೆಯಿತು.
ಊರಿನಲ್ಲಿ ನೀರಿಗೆ ಹಾಹಾಕಾರ ಉಂಟಾಗಿದ್ದರೂ ಪರ್ಯಾಯ ಕ್ರಮ ಕೈಗೊಳ್ಳದ ಗ್ರಾಮ ಪಂಚಾಯಿತಿ ವೈಖರಿ ಖಂಡಿಸಿ ಘೋಷಣೆ ಕೂಗಿದರು.
ಕುಡಿಯಲು ಯೋಗ್ಯವಿಲ್ಲದ ಕಲುಷಿತ ನೀರನ್ನೇ ಕುಡಿಯಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಇನ್ನಾದರೂ ಗ್ರಾಮಕ್ಕೆ ನೀರಿಗಾಗಿ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ಢತಾಪಂ ಕಾರ್ಯ ನಿರ್ವಹಣಾಧಿಕಾರಿ ಜಯಣ್ಣ ಸ್ಥಳಕ್ಕೆ ಧಾವಿಸಿ ಮನವಿ ಆಲಿಸಬೇಕು. ಬಿಳಿಚೋಡು ಗ್ರಾಪಂ ವ್ಯಾಪ್ತಿಯ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಉದಾಸೀನ ಮಾಡಿದರೆ ಗ್ರಾಪಂ ಕಚೇರಿಗೆ ಬೀಗ ಜಡಿಯಬೇಕಾದೀತು ಎಂದು ಅವರು ಎಚ್ಚರಿಸಿದರು. ತಾಪಂ ಇಓ ಜಯಣ್ಣ ಸ್ಥಳಕ್ಕೆ ಧಾವಿಸಿ, ಗ್ರಾಮಸ್ಥರ ಅಹವಾಲು ಆಲಿಸಿದರು. ಗ್ರಾಪಂ ಕಾರ್ಯದರ್ಶಿ ಬಸವರಾಜಪ್ಪಗೆ ಜಿಪಂ ಕಚೇರಿಗೆ ಭೇಟಿ ನೀಡಿ, ನೀರಿನ ಸಮಸ್ಯೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಲು ಸೂಚಿಸಿದರು.