ರಸ್ತೆ ಗುಂಡಿಗಳ ಭರ್ತಿಗೆ ಸೂಚನೆ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಆ. 4
ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಬಡಾವಣೆಗಳ ರಸ್ತೆಗಳು ತೀರ ಹದಗೆಟ್ಟಿದ್ದು, ತಕ್ಷಣ ಗುಂಡಿಗಳನ್ನು ಭರ್ತಿ ಮಾಡುವುದಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಮೀರ ಶುಕ್ಲಾ ಅವರಿಗೆ ಸೂಚಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ಭಾನುವಾರ, ಹುಬ್ಬಳ್ಳಿ ನಗರದ ಭಾರತ ನಗರ, ಹೇಮರೆಡ್ಡಿ ನಗರ, ಆನಂದ ನಗರದ ಸೇತುವೆ, ಮಾರುತಿ ನಗರ ಮತ್ತು ಹೆಗ್ಗೇರಿ ಪ್ರದೇಶಗಳಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.
ವಾರ್ಡ್ ನಂ. 40ರ ಹೇಮರೆಡ್ಡಿ ನಗರದ ನಿವಾಸಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಆಡಳಿತದಲ್ಲಿದ್ದ ಸಂದರ್ಭದಲ್ಲಿ ಅಕ್ರಮ ಮನೆಗಳನ್ನು ಸಕ್ರಮಗೊಳಿಸುವುದಕ್ಕೆ ಮಸೂದೆ ಜಾರಿಗೆ ತಂದಿತ್ತು. ಆದರೆ ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಮಸೂದೆಗೆ ಸಹಿ ಹಾಕದ ಕಾರಣ ಅಕ್ರಮ ಸಕ್ರಮ ಮಸೂದೆ ಜಾರಿ ತರಲು ಸಾಧ್ಯವಾಗಿರಲಿಲ್ಲ. ರಾಜ್ಯದ ಅನೇಕ ನಗರಗಳಲ್ಲಿ ಅಕ್ರಮವಾಗಿ ಅನೇಕ ಜನರು ಮನೆ ನಿರ್ಮಿಸಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರಪ್ರದೇಶಗಳಲ್ಲಿ ಅಕ್ರಮವಾಗಿ ಮನೆ ನಿರ್ಮಾಣಗೊಂಡ ಮನೆಗಳನ್ನು ಒಂದೇ ಬಾರಿಗೆ ಸಕ್ರಮಗೊಳಿಸುವುದಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದೇವೆ.
ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳು ನಿಧಾನ ಗತಿಯಲ್ಲಿ ಸಾಗುತ್ತಿವೆ. ಮಳೆಯಿಂದಾಗಿ ರಸ್ತೆಗಳು ಹದಗೆಟ್ಟಿದ್ದು ತಕ್ಷಣ ರಸ್ತೆ ರಿಪೇರಿ ಕೆಲಸ ಕೈಗೆತ್ತಿಕೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗುವುದು ಎಂದು ಹೇಳಿದರು.
ನಗರದಲ್ಲಿ ಒಳಚರಂಡಿ ಕಾಮಗಾರಿ ನಿರ್ಮಾಣ ನಡೆಯುತ್ತಿದ್ದು ಇದರ ಜೊತೆಗೆ ಮಳೆ ಕೂಡ ನಿರಂತರವಾಗಿ ಸುರಿಯುತ್ತಿರುವುದರಿಂದ ರಸ್ತೆಗಳಲ್ಲಿ ಗುಂಡಿ ಬಿದ್ದು, ವಾಹನ ಸಂಚಾರಕ್ಕೆ ಸಾಕಷ್ಟು ತೊಂದರೆಯಾಗುತ್ತಿದೆ. ಮಳೆಗಾಲು ಮುಗಿಯುತ್ತಿದ್ದಂತೆಯೇ ರಸ್ತೆ ಡಾಂಬರೀಕರಣ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.
ನಾಗೇಶ ಕಲ್ಬುರ್ಗಿ, ಮಾಜಿ ಮೇಯರ್ ಪ್ರಕಾಶ ಕ್ಯಾರಕಟ್ಟಿ ಇನ್ನಿತರರು ಇದ್ದರು.