ಅಕ್ರಮ ಗಣಿಗಾರಿಕೆ: ಶೀಘ್ರ ಪುನರ್ ಪರಿಶೀಲನಾ ಅರ್ಜಿ ಸಲ್ಲಿಕೆ
ಧಾರವಾಡ: ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿರುವ ಹಾಗೂ ಅದಕ್ಕೆ ಸಂಬಂಧಿಸಿದ ವ್ಯವಹಾರಗಳ ವಿರುದ್ಧ ತನಿಖೆ ನಡೆಸಬೇಕೆಂದು ಸಲ್ಲಿಕೆಯಾಗಿದ್ದ ಮಧ್ಯಂತರ ಅರ್ಜಿಯನ್ನು ಸುಪ್ರೀಂ ಕೋರ್ಟ್ನ ಹಸಿರು ಪೀಠ ಸೋಮವಾರ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್.ಆರ್. ಹಿರೇಮಠ ಪುನರ್ ಪರಿಶೀಲನಾ ಅರ್ಜಿ ಹಾಕಲು ತೀರ್ಮಾನಿಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಕುರಿತು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಅರಣ್ಯ ಪೀಠ ಕಳೆದ ಏಪ್ರಿಲ್ 18ರಂದು 81 ಪುಟಗಳ ಆದೇಶ ನೀಡಿತ್ತು. ಆಗ 185-13ರ ಅನ್ವಯ ಬಾಕಿ ಉಳಿದ ಕೆಲಸಗಳ ಕುರಿತು ಸುಪ್ರೀಂ ಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ಸೋಮವಾರ ವಜಾಗೊಂಡಿದ್ದು, ಪುನರ್ ಪರಿಶೀಲನಾ ಅರ್ಜಿ ಹಾಕಲು ಸುಪ್ರೀಂ ಕೋರ್ಟ್ ಅವಕಾಶ ಕೊಟ್ಟಿದೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ರಾಜಕೀಯ ಪ್ರಭಾವ ಬೆಳೆಸಿಕೊಳ್ಳಲು ಮಾಧ್ಯಮದೆದುರು ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಇದಕ್ಕೆಲ್ಲ ನಾನು ಸೊಪ್ಪು ಹಾಕೋದಿಲ್ಲ. ಅಕ್ರಮ ಗಣಿಗಾರಿಕೆ ನಡೆಸಿದವರ ವಿರುದ್ಧ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.