ಶ್ರಮಶಕ್ತಿ, ನೇರಸಾಲ ವಿಳಂಬ: ಪ್ರತಿಭಟನೆ
ಹುಬ್ಬಳ್ಳಿ: ಧಾರವಾಡ ಜಿಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಶ್ರಮಶಕ್ತಿ, ನೇರಸಾಲ ಮಂಜೂರಾತಿಯಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ದಲಿತ ಹಿಂದುಳಿದ ಅಲ್ಪಸಂಖ್ಯಾತರ ಶಿಕ್ಷಣ ಮತ್ತು ಕಲ್ಯಾಣ ಸಂಘದ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಫಲಾನುಭವಿಗಳಿಗೆ ನ್ಯಾಯಯುತವಾಗಿ ಸಾಲ ಮಂಜೂರು ಮಾಡಬೇಕಾದ ಅಧಿಕಾರಿಗಳು ವಿನಾಕಾರಣ ಸತಾಯಿಸುತ್ತಿರುವುದರಿಂದ ಫಲಾನುಭವಿಗಳಿಗೆ ತೀರಾ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಶಾಸಕರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜವಾಗದೆ ಇರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವ ಅನಿವಾರ್ಯತೆ ಎದುರಾಗಿದೆ ಎಂದು ಸಂಘದ ಹಲವಾರು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಮಿನಿ ವಿಧಾನಸೌಧದ ಎದುರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೆಎಂಡಿಸಿ ವ್ಯವಸ್ಥಾಪಕ ನಿರ್ದೇಶಕರ ಪ್ರತಿಕೃತಿ ದಹಿಸಿದರು. 15 ದಿನದೊಳಗಾಗಿ ಕೆಎಂಡಿಸಿ ವ್ಯವಸ್ಥಾಪಕ ನಿರ್ದೇಶಕರನ್ನು ವರ್ಗಾವಣೆ ಮಾಡುವಂತೆ ಆಗ್ರಹಿಸಿ ಮನವಿ ಪತ್ರವನ್ನು ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಅರ್ಪಿಸಲಾಯಿತು.
ಸಂಘದ ಪ್ರಧಾನ ಕಾರ್ಯದರ್ಶಿ ಎ.ಸಿ. ಅರಸಿಕೇರಿ, ರಮೇಶ ವಡ್ಡಪಲ್ಲಿ, ನಿಜಾಮುದ್ದೀನ ಮನಿಯಾರ್, ಯಲ್ಲಪ್ಪ ಬಾಗಲಕೋಟೆ, ರಾಮಚಂದ್ರ ಸುಳ್ಳದ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.