ಮೆಡಿಕಲ್, ಎಂಜಿನಿಯರಿಂಗ್ ಪ್ರವೇಶಕ್ಕೆ ಹೊಸ ಕಾನೂನು ಜಾರಿಗೆ ತರಲಿ: ಶೆಟ್ಟರ್
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಡಿ. 18
ಬಡ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಪಡೆಯುವಂತಾಗಲು ಹೊಸ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆಗ್ರಹಿಸಿದರು.
ದೇಶದ ಎಲ್ಲ ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಿಕೊಂಡು ಬರಬೇಕಾದಲ್ಲಿ 2006ರ ಕಾಯ್ದೆಯನ್ನು ಮರು ಪರಿಶೀಲಿಸಲು ಕೇಂದ್ರ ಸರ್ಕಾರದ ನೆರವು ಪಡೆಯಬೇಕು. ಅಲ್ಲದೇ, ಇದಕ್ಕೆ ಸಂಬಂಧಿಸಿದಂತೆ ಹೊಸ ಕಾನೂನು ಜಾರಿಗೆ ತರಬೇಕು ಎಂದು ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
2006ರ ಕಾಯ್ದೆ ಸರ್ವೋಚ್ಚ ನ್ಯಾಯಾಲಯದ ಆದೇಶವಾಗಿದೆ. ಇದನ್ನು ಅನುಷ್ಠಾನಕ್ಕೆ ತರುವುದಕ್ಕೆ ಸಂಬಂಧಿಸಿದಂತೆ ಸಿಎಂ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಲ್ಲಿ ಸಾಕಷ್ಟು ಗೊಂದಲಗಳಿವೆ. ಇದರಿಂದಾಗಿ ವಿದ್ಯಾರ್ಥಿಗಳು ತೀವ್ರ ಆತಂಕಗೊಂಡಿದ್ದಾರೆ ಎಂದು ಹೇಳಿದರು.
ಕಾಯ್ದೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿರುವ ಸಮನ್ವಯ ಸಮಿತಿಯಲ್ಲಿ ಸಮನ್ವಯತೆ ಕೊರತೆ ಇದೆ. ಆದ್ದರಿಂದ ಈ ಬಗ್ಗೆ ಪ್ರತ್ಯೇಕ ಸಭೆ ನಡೆಸಿ, ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಕಾನೂನು ಜಾರಿಗೆ ತರುವ ಮೂಲಕ ಸಾಮಾಜಿಕ ನ್ಯಾಯ ಕಾಪಾಡಲು ಸರ್ಕಾರ ಮುಂದಾಗಬೇಕಿದೆ ಎಂದರು.
ತೆರವುಗೊಳಿಸಲಿ: ಸ್ಥಳೀಯ ಸಂಸ್ಥೆಗಳಿಗೆ ಮೇಯರ್ ಹಾಗೂ ಉಪಮೇಯರ್ ಮೀಸಲಾತಿಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯ ನೀಡಿರುವ ತಡೆಯಾಜ್ಞೆ ತೆರವುಗೊಳಿಸುವಲ್ಲಿ ಸರ್ಕಾರ ಉದ್ದೇಶಪೂರ್ವಕವಾಗಿಯೇ ಹಿಂದೇಟು ಹಾಕಿದೆ ಎಂದೂ ಶೆಟ್ಟರ್ ದೂರಿದರು.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿರೋಧಪಕ್ಷಗಳು ಒಂದಾಗಬಹುದೆಂಬ ಭಯದಿಂದ ಕಾಂಗ್ರೆಸ್ ಈ ಧೋರಣೆ ಅನುಸರಿಸಿದೆ ಎಂದೂ ಆರೋಪಿಸಿದರು.
ಏಕ ರೀತಿಯ ಮರಳು ನೀತಿ ರೂಪಿಸಲು ಸರ್ಕಾರ ತಕ್ಷಣ ಕ್ರಮಕೈಗೊಳ್ಳಬೇಕು. ಜನಪ್ರಿಯತೆಗಾಗಿ ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶೆಟ್ಟರ್, ಸರ್ಕಾರದ ಬಳಿ ಹಣವಿಲ್ಲ. ಕಾಂಗ್ರೆಸ್‌ನ ಕಾರ್ಯವೈಖರಿಯನ್ನು ರಾಜ್ಯಪಾಲರೂ ಖಂಡಿಸುತ್ತಿದ್ದಾರೆಂದರು.