ಆಡಳಿತ ನಿರ್ವಹಿಸಲು ಸಿದ್ದರಾಮಯ್ಯ ವಿಫಲ
ಹುಬ್ಬಳ್ಳಿ: ಆಡಳಿತ ಯಂತ್ರವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪೂರ್ಣ ವಿಫಲಗೊಂಡಿದ್ದರ ಪರಿಣಾಮ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ಮರೀಚಿಕೆಯಾಗಿವೆ. ಅಲ್ಲದೆ, ಹಣಕಾಸಿನ ಸ್ಥಿತಿಯೂ ಶೋಚನೀಯ ಸ್ಥಿತಿಗೆ ತಲುಪಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪಿಸಿದರು.
ಗೋಕುಲ ರಸ್ತೆಯ ಗೋಕುಲ ಗಾರ್ಡನ್‌ನಲ್ಲಿ ಸೋಮವಾರ ಬೆಳಗ್ಗೆ ಬಿಜೆಪಿ ಧಾರವಾಡ ಲೋಕಸಭೆ ಕ್ಷೇತ್ರದ ಶಕ್ತಿ ಕೇಂದ್ರಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಭಾಷಣದ್ದುದಕ್ಕೂ ರಾಜ್ಯ ಸರ್ಕಾರದ ಆಡಳಿತ ವೈಖರಿಯನ್ನು ಕಟುವಾಗಿ ಟೀಕಿಸಿದ ಅವರು, ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ ಭ್ರಷ್ಟಾಚಾರ ವಿಷಯದ ಬಗ್ಗೆ ಮಾತನಾಡುತ್ತಿರುವ ಬಗ್ಗೆಯೂ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸಂಘರ್ಷಕ್ಕೆ ಹಾದಿ: ಭಾಗ್ಯಲಕ್ಷ್ಮಿಯಂತಹ ಯೋಜನೆ ಜಾರಿಗೆ ತರುವ ಮೂಲಕ ಬಿಜೆಪಿ ಸರ್ಕಾರ ಎಲ್ಲ ವರ್ಗದ ಜನರಿಗೆ ಅನುಕೂಲ ಕಲ್ಪಿಸಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತ ವರ್ಗದವರಿಗಷ್ಟೇ ಶಾದಿಭಾಗ್ಯ ಯೋಜನೆ ಜಾರಿಗೆ ತರುವ ಮೂಲಕ ಜಾತಿ-ಜಾತಿಗಳ ಮಧ್ಯೆ ಸಂಘರ್ಷವನ್ನುಂಟು ಮಾಡಲು ಯತ್ನಿಸಿದೆ. ಸಿಇಟಿ 2006 ಕಾಯ್ದೆ ಸಮ್ಮಿಶ್ರ ಸರ್ಕಾರದಲ್ಲಿ ರಚಿಸಲಾಗಿತ್ತಾದರೂ ಬಡವ ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆಯಾಗಲಿದೆ ಎಂಬುದನ್ನು ತಿಳಿದು ಬಿಜೆಪಿ ಸರ್ಕಾರ ಕಾಯ್ದೆಯನ್ನು ಜಾರಿಗೆ ತಂದಿರಲಿಲ್ಲ. ಹಿಂದೂ ಧರ್ಮೀಯರ ಭಾವನೆಗೆ ಧಕ್ಕೆಯನ್ನುಂಟು ಮಾಡುವ ಮೂಢನಂಬಿಕೆ ನಿಷೇಧ ಕಾಯ್ದೆ ಜಾರಿಗೆ ತರಲು ಯತ್ನಿಸಲಾಗಿತ್ತು. ರೈತ, ಕೂಲಿ ಕಾರ್ಮಿಕ, ಶ್ರೀಸಾಮಾನ್ಯರು ಆತ್ಮಹತ್ಯೆಯಂತಹ ದಾರಿ ಹಿಡಿದಾಗ ಸರ್ಕಾರ ಎಚ್ಚೆತ್ತುಕೊಳ್ಳುತ್ತಿರುವುದು ದುರ್ದೈವದ ಸಂಗತಿ ಎಂದರು.
ಯೋಗ್ಯತೆ ಇಲ್ಲವೇ...?: ಧಾರವಾಡ ಜಿಲ್ಲೆ ಉಸ್ತುವಾರಿ ಸ್ಥಾನ ತುಂಬುವ ಅರ್ಹತೆ ಈ ಭಾಗದ ಯಾವ ಶಾಸಕರಲ್ಲಿಯೂ ಇಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದ ಶೆಟ್ಟರ್, ಸರ್ಕಾರ ಜಾರಿಗೆ ತಂದಿರುವ ಹೊಸ ಮರಳು ನೀತಿಯಲ್ಲಿ ರಾಜಕಾರಣಿಗಳು ಶಾಮೀಲಾಗಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ಕೇಂದ್ರದ ಯುಪಿಎ ಸರ್ಕಾರದ ಭ್ರಷ್ಟಾಚಾರದಿಂದ ಜನತೆ ಬೇಸತ್ತು ಇಂದು ಬದಲಾವಣೆ ಬಯಸುತ್ತಿದ್ದು ಸಮರ್ಥ ನಾಯಕತ್ವ ಹಾಗೂ ಉಜ್ವಲ ಭಾರತಕ್ಕಾಗಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ನಾವೆಲ್ಲರೂ ಮುಂದಾಗೋಣ ಎಂದೂ ಶೆಟ್ಟರ್ ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಬಸವರಾಜ ಬೊಮ್ಮಾಯಿ, 2014ರ ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಧ್ರುವೀಕರಣವಾಗಲಿದೆ ಮಾತ್ರವಲ್ಲದೆ, ಸಾಮಾಜಿಕ ಸಮೀಕರಣಕ್ಕೂ ನಾಂದಿ ಹಾಡಲಿದೆ. ಜಾಗ್ರತ ಭಾರತಕ್ಕಾಗಿ ನಡೆಯಲಿರುವ ಈ ಚುನಾವಣೆಯಲ್ಲಿ ನಾವೆಲ್ಲರೂ ಸೇರಿ ನರೇಂದ್ರ ಮೋದಿ ಅವರ ಕೈಬಲಪಡಿಸಬೇಕಿದೆ. ರಾಜ್ಯ ಸರ್ಕಾರದ ಆಡಳಿತ ವೈಖರಿಗೆ ಶ್ರೀಸಾಮಾನ್ಯರು ಹಿಡಿಶಾಪ ಹಾಕುವಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ದೂರಿದರು.
ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ, ಶಾಸಕ ಅರವಿಂದ ಬೆಲ್ಲದ, ಮಾಜಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ವೀರಭದ್ರಪ್ಪ ಹಾಲಹರವಿ, ಶಿವಾನಂದ ಅಂಬಡಗಟ್ಟಿ, ಮೋಹನ ಲಿಂಬಿಕಾಯಿ, ಸೋಮಣ್ಣ ಬೇವಿನಮರದ, ರಂಗಾ ಬದ್ದಿ, ಸಿ.ಎಂ. ನಿಂಬಣ್ಣವರ, ಲಿಂಗರಾಜ ಪಾಟೀಲ, ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ, ಶಿವಾನಂದ ಕಲ್ಲೂರ ಸೇರಿದಂತೆ ಮತ್ತಿತರರು ಇದ್ದರು.