ಧರಣಿಗೆ ಸ್ಪಂದಿಸದಿದ್ದರೆ ಆತ್ಮಾಹುತಿ
ಧಾರವಾಡ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಹು-ಧಾ ಮಹಾನಗರ ಪಾಲಿಕೆಯ ಗುತ್ತಿಗೆ ಪೌರಕಾರ್ಮಿಕರು ಸೋಮವಾರದಿಂದ ಅಹೋರಾತ್ರಿ ಧರಣಿ ಹಾಗೂ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪೌರಕಾರ್ಮಿಕ ಸಂಘದ ಸಹ ಕಾರ್ಯದರ್ಶಿ ಲಕ್ಷಣ ದೊಡ್ಡಮನಿ, ಕಳೆದ 11 ದಿನಗಳಿಂದ ಹೋರಾಟ ಕೈಗೊಂಡಿದ್ದರೂ ಪಾಲಿಕೆ ಸ್ಪಂದಿಸಿಲ್ಲ. ಸರ್ಕಾರದ ಮನವೊಲಿಸಲು ವಿವಿಧ ರೀತಿಯ ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ. ಆದರೂ ಸರ್ಕಾರ ಗುತ್ತಿಗೆ ಪೌರಕಾರ್ಮಿಕರನ್ನು ಕಡೆಗಣಿಸುತ್ತಿದೆ ಎಂದರು. ಈ ಕುರಿತು ಮಹಾಪೌರ ಪಾಂಡುರಂಗ ಪಾಟೀಲ ಅವರನ್ನು ಕೇಳಿದರೆ, ಗುತ್ತಿಗೆ ಪೌರ ಕಾರ್ಮಿಕರಿಗೂ ಪಾಲಿಕೆಗೂ ಯಾವುದೇ ರೀತಿಯ ಸಂಬಂಧವಿಲ್ಲ ಎನ್ನುತ್ತಿದ್ದಾರೆ. 2001ರಲ್ಲಿ ಗುತ್ತಿಗೆ ಪೌರಕಾರ್ಮಿಕರು 14 ದಿನ ಹೋರಾಟ ನಡೆಸಿದ್ದೇವೆ. ಆ ಸಂದರ್ಭದಲ್ಲಿ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪೌರ ಕಾರ್ಮಿಕರಿಗೆ ಕನಿಷ್ಠ ವೇತನ ನೀಡಲು ಅನುಮೋದಿಸಲಾಗಿತ್ತು. ಆದರೆ, ಇದೀಗ ಮೇಯರ್ ಅವರು ಪಾಲಿಕೆ ಸಂಬಂಧವಿಲ್ಲ ಎನ್ನುತ್ತಿದ್ದಾರೆ. ನಾವು ಪಾಲಿಕೆ ವ್ಯಾಪ್ತಿಗೆ ಬರುತ್ತೇವೆ ಎಂಬುದು ಸಾಬೀತಾದರೆ ಮೇಯರ್ ಪಾಂಡುರಂಗ ಅವರು ರಾಜಕೀಯ ನಿವೃತ್ತಿ ಘೋಷಿಸಬೇಕೆಂದು ಹೇಳಿದರು. ಸರ್ಕಾರ ಹಾಗೂ ಮಹಾನಗರ ಪಾಲಿಕೆ ಅಹೋರಾತ್ರಿ ಧರಣಿ ಹಾಗೂ ಉಪವಾಸ ಸತ್ಯಾಗ್ರಹಕ್ಕೆ ಸ್ಪಂದಿಸದಿದ್ದಲ್ಲಿ, ಆತ್ಮಾಹುತಿ ಮಾಡಿಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಸಿಡ್ಲೆಪ್ಪ ಹೆಗಡೆ, ಪರಶುರಾಮ ದೊಡ್ಡಮನಿ, ಮಲ್ಲೇಶಪ್ಪ ಹಾದಿಮನಿ ಇದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.