ಅಟಲ್‌ಜೀ ಜನಸ್ನೇಹಿ ಕೇಂದ್ರದ ಸಮಸ್ಯೆ ಪರಿಹರಿಸಿ
ಧಾರವಾಡ: ಬಿಜೆಪಿ ಪಕ್ಷ ಜನಸಾಮಾನ್ಯರಿಗೆ ಅನುಕೂಲವಾಗುವ ದೃಷ್ಠಿಯಿಂದ ಜಾರಿಗೆ ತಂದಿರುವ ಅಟಲ್‌ಜೀ ಜನಸ್ನೇಹಿ ಕೇಂದ್ರದಲ್ಲಿ ಸಂಭವಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕೆಂದು ಬಿಜೆಪಿ ಜಿಲ್ಲಾ ಸ್ಲಂ ಮೋರ್ಚಾ ಮಾಜಿ ಅಧ್ಯಕ್ಷ ಮಾರುತಿ ನಾಯ್ಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ತಾಲೂಕಿನ ತಹಸೀಲ್ದಾರ್ ಕಚೇರಿಗಳಲ್ಲಿರುವ ಹಿರಿಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಯೋಜನೆ ಸಾರ್ವಜನಿಕರಿಗೆ ಸೂಕ್ತ ರೀತಿ ಕೈಗೆಟುಕುತ್ತಿಲ್ಲ. ಅಲ್ಲದೇ, ಈ ಕೇಂದ್ರಕ್ಕೆ ಆಗಮಿಸಿದ ಸಾರ್ವಜನಿಕರಿಗೆ ಅಧಿಕಾರಿಗಳು ಕೇಂದ್ರದಲ್ಲಿ ಹಲವು ತೊಂದರೆಗಳಿವೆ. ಅವು ನಿವಾರಣೆಯಾಗುವವರೆಗೂ ಯಾವುದೇ ಕಾರ್ಯವನ್ನು ಮಾಡಲಾಗದು ಎಂಬ ಬೇಜವಾಬ್ದಾರಿ ಉತ್ತರ ನೀಡುತ್ತಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.
ಅಟಲ್‌ಜೀ ಜನಸ್ನೇಹಿ ಕೇಂದ್ರಕ್ಕೆ ಬಿಎಸ್ಸೆನ್ನೆಲ್, ಹೆಸ್ಕಾಂನಿಂದಾಗುವ ಸಮಸ್ಯೆಗೆ ಜಿಲ್ಲಾಧಿಕಾರಿ ಪರಿಹಾರ ಒದಗಿಸಬೇಕು. ಕೇಂದ್ರಕ್ಕೆ ಜನರೇಟರ್ ವ್ಯವಸ್ಥೆ ಕಲ್ಪಿಸಿ ಸಾರ್ವಜನಿಕರು ಕೇಂದ್ರದ ಸದ್ಬಳಕೆ ಮಾಡಿಕೊಳ್ಳಬೇಕೆಂದು ಮಾರುತಿ ನಾಯ್ಕ ಮನವಿಯಲ್ಲಿ ಆಗ್ರಹಿಸಿದ್ದಾರೆ.