ಯುಜಿಡಿ ಕೆಲಸ ಶೇ. 50 ಆಗಿಲ್ಲ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರ ವ್ಯಾಪ್ತಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಒಳಚರಂಡಿ ನಿರ್ಮಾಣ ಕಾಮಗಾರಿಯಲ್ಲಿ ಶೇ. 50ರಷ್ಟು ಪ್ರಗತಿ ಸಾಧಿಸಿಲ್ಲ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು.
ಶುಕ್ರವಾರ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಒಳಚರಂಡಿ ನಿರ್ಮಾಣ ಕಾಮಗಾರಿಯಲ್ಲಿ ಸಾಕಷ್ಟು ನ್ಯೂನತೆ ಇದೆ. ಕಾಮಗಾರಿ ವಿಳಂಬವಾಗಿದೆ. ಕಾಮಗಾರಿಯಲ್ಲಿ ಆಗುತ್ತಿರುವ ವಿಳಂಬಕ್ಕೆ ಸಂಬಂಧಿಸಿದಂತೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರತಿ ವಾರ ಪರಿಶೀಲನಾ ವರದಿ ಮತ್ತು ಸಭೆ ಮಾಡಬೇಕು ಎಂದು ತೀರ್ಮಾನಿಸಲಾಗಿದ್ದು, ಮಹಾನಗರ ಪಾಲಿಕೆ ಆಯುಕ್ತ ವೈ.ಎಸ್. ಪಾಟೀಲ ಅವರಿಗೆ ಸಲ್ಲಿಸಲಾಗುವ ಪ್ರಗತಿ ವರದಿ ನನ್ನ ಮತ್ತು ಜಿಲ್ಲಾಧಿಕಾರಿ ಸಮೀರ್ ಶುಕ್ಲಾ ಗಮನಕ್ಕೂ ಬರಲಿದೆ ಎಂದರು.
ಮಳೆಗಾಲ ಸಮೀಪಿಸುತ್ತಿರುವುದರಿಂದ ಅರ್ಧಕ್ಕೆ ನಿಂತಿರುವ ಕಾಮಗಾರಿಯನ್ನು ಪೂರ್ಣಗೊಳಿಸಲು ಜನವರಿ 2014 ರವರೆಗೆ ಗಡವು ನೀಡಲಾಗಿದೆ. ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಉದ್ಭವವಾಗಿರುವ ಸ್ಥಳೀಯ ಸಮಸ್ಯೆಯನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಸೇರಿ ಪರಿಹರಿಸಲಾಗುವುದು. ಹಳೇ ಹುಬ್ಬಳ್ಳಿ ಮತ್ತು ವಿದ್ಯಾನಗರ ಪ್ರದೇಶದಲ್ಲಿ ತಕ್ಷಣ ರೋಡ್ ಮೆಟ್ಲಿಂಗ್ ಕೆಲಸ ಆಗಬೇಕು. ಇನ್ನು ಮುಂದೆ ಒಳಚರಂಡಿ ನಿರ್ಮಾಣ ಕಾಮಗಾರಿ ಆಮೆ ಗತಿಯಲ್ಲಿ ಸಾಗುವಂತಿಲ್ಲ. ಕಾಮಗಾರಿ ವಿಳಂಬವಾದರೆ ಅದಕ್ಕೆ ಗುತ್ತಿಗೆದಾರರು ಹೊಣೆಗಾರರನ್ನಾಗಿ ಮಾಡಿ ಅವರಿಂದ ಲಿಕ್ವಿಡೇಷನ್ ಡ್ಯಾಮೇಜ್ ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳುವುದಕ್ಕೆ ತೃತೀಯ ಪಕ್ಷ ಪರಿಶೀಲನೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಸುರಕ್ಷತಾ ಕ್ರಮ ಅನುಸರಿಸದಿದ್ದರೆ ಗುತ್ತಿಗೆದಾರರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಅಧಿಕಾರಿಗಳಿಗೆ ಇದು ಕೊನೆ ಅವಕಾಶ: 2 ವರ್ಷಗಳಿಂದ ನಡೆಯುತ್ತಿರುವ ಒಳಚರಂಡಿ ನಿರ್ಮಾಣ ಕಾಮಗಾರಿ ವಿಸ್ತರಿಸಿದ ಅವಧಿಯೊಳಗೆ ಮುಗಿಸಲು ಅಧಿಕಾರಿಗಳು ಬದ್ಧರಾಗಿರಬೇಕು. ವಿಳಂಬ ನೀತಿ, ಕರ್ತವ್ಯದಲ್ಲಿ ನಿರ್ಲಕ್ಷ್ಯ ಮುಂದುವರಿದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾಧಿಕಾರಿ ಸಮೀರ್ ಶುಕ್ಲಾ, ಮಹಾನಗರ ಪಾಲಿಕೆ ಆಯುಕ್ತ ವೈ.ಎಸ್. ಪಾಟೀಲ, ಮಾಜಿ ಮಹಾಪೌರ ಡಾ. ಪಾಂಡುರಂಗ ಪಾಟೀಲ ಇದ್ದರು.