ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಮೈಸೂರು ಮಿನರಲ್ಸ್ ಗಣಿ ಅಕ್ರಮ: ಸಿಬಿಐ ತನಿಖೆಗೆ ಹಿರೇಮಠ್ ಆಗ್ರಹ

Rashmi Kasaragodu
Updated On : 4 Nov 2013, 11:38 am

ಧಾರವಾಡ: ಮೈಸೂರು ಮಿನರಲ್ಸ್ ಲಿಮಿಟೆಡ್ನಲ್ಲಿ ಸಾಕಷ್ಟು ಪ್ರಮಾಣದ ಗಣಿ ಅಕ್ರಮ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್.ಆರ್. ಹಿರೇಮಠ್ ಒತ್ತಾಯಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮೈಸೂರು ಮಿನರಲ್ಸ್ ಅಕ್ರಮ ಚಟುವಟಿಕೆಯಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಡಿ.ಕೆ. ಶಿವಕುಮಾರ್, ಅವರ ಸಹೋದರ ಸಂಸದ ಡಿ.ಕೆ. ಸುರೇಶ ಅವರೊಂದಿಗೆ ಹಿರಿಯ ಐಎಎಸ್ ಹಾಗೂ ಐಎಫ್ಎಸ್ ಅಧಿಕಾರಿಗಳೂ ಭಾಗಿಯಾಗಿದ್ದಾರೆ. ಈ ಪ್ರಕರಣ ಕುರಿತು ಪೂರ್ಣ ಪ್ರಮಾಣದ ತನಿಖೆ ಸಿಬಿಐಯಿಂದ ಮಾತ್ರ ಸಾಧ್ಯ. ಆದ್ದರಿಂದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿದರು.
ಸಿಎಂ ವಿಳಂಬ ನೀತಿ ಸರಿಯಿಲ್ಲ: ಅಕ್ರಮ ಗಣಿಗಾರಿಕೆಯಲ್ಲಿ ಒಂಬತ್ತು ಬಂದರುಗಳಿಂದ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೂ ಮುಖ್ಯಮಂತ್ರಿ ತನಿಖೆಗೆ ವಿಳಂಬ ಮಾಡುತ್ತಿರುವುದು ಸರಿಯಲ್ಲ. ಕಳೆದ ಬಾರಿ ವಿರೋಧ ಪಕ್ಷದಲ್ಲಿದ್ದಾಗ ಅಕ್ರಮ ಗಣಿಗಾರಿಕೆ ವಿರುದ್ಧ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡುವ ಮೂಲಕ ಗಣಿಗಾರಿಕೆಗೆ ಪ್ರತಿರೋಧ ಒಡ್ಡಿದ್ದರು. ಅಲ್ಲದೇ, ಆ ಸಂದರ್ಭದಲ್ಲಿ ಯಾರೇ ಅಕ್ರಮ ಗಣಿಗಾರಿಕೆಯಲ್ಲಿದ್ದರೂ ಅವರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ, ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳುಗಳು ಕಳೆದರೂ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವ ಹಲವರ  ವಿರುದ್ಧ ಕ್ರಮ ಕೈಗೊಳ್ಳದೆ ವಿಳಂಬ ಧೋರಣೆ ಅನುಸರಿಸುತ್ತಿರುವುದು ಬೇಸರದ ಸಂಗತಿ ಎಂದರು.
ಸಚಿವ ಲಾಡ್ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮಾನನಷ್ಟ ಮೊಕದ್ದಮೆ ಪ್ರಕರಣಗಳು ನ್ಯಾಯಾಲಯದಲ್ಲಿ ನಡೆಯುತ್ತವೆ ಹೊರತು ಯಾರ ಮನೆಯಲ್ಲಿಯೂ ಅಲ್ಲ. ಲಾಡ್ ಅವರು ಅಕ್ರಮ ಗಣಿಗಾರಿಕೆ ಕುರಿತ 120 ಪುಟಗಳ ವರದಿಯನ್ನು ನ್ಯಾಯಾಧೀಶರ ಮುಂದಿಟ್ಟರೆ, ಅವರ ಮಾನವೇ ಹೋಗುತ್ತದೆ. ಇಂಥ ರಾಜಕಾರಣಿಗಳು ಬಹಳ ಜನರಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement