ಮಸೂದೆ ಜಾರಿ ನೆಪದಲ್ಲಿ ಜನತೆ ಭಾವನೆಗೆ ಧಕ್ಕೆ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ನ. 6
ಮೂಢನಂಬಿಕೆ ವಿರುದ್ಧದ ಮಸೂದೆ ಜಾರಿಗೆ ತರುವ ನೆಪದಲ್ಲಿ ಸಾರ್ವಜನಿಕರ ಧಾರ್ಮಿಕ ಭಾವನೆಗೆ ಧಕ್ಕೆ ತರಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಬಿಜೆಪಿ ವಿರೋಧಿಸುವುದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ ಶೆಟ್ಟರ್ ಹೇಳಿದರು.
ನಗರದಲ್ಲಿ ಬುಧವಾರ ಆಯೋಜಿಸಿದ್ದ ಬಿಜೆಪಿ ಯುವಮೋರ್ಚಾ ಮಹಾನಗರ ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಬಿಜೆಪಿಗೆ ಜನಬೆಂಬಲ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡದ ಸರ್ಕಾರ ಜನರ ಭಾವನೆಗಳಿಗೆ ಧಕ್ಕೆ ತರಲು ಹೊರಟಿದೆ ಎಂದು ಟೀಕಿಸಿದರು. ಬಿಜೆಪಿಯ ಎಲ್ಲ ಮೋರ್ಚಾ ಹಾಗೂ ಎಲ್ಲ ಘಟಕಗಳ ಸಂಘಟನೆಗೆ ಒತ್ತು ನೀಡಲಾಗುತ್ತಿದೆ. ಸಾಮೂಹಿಕ ನಾಯಕತ್ವ, ತತ್ವ, ಸಿದ್ಧಾಂತಗಳಿಗೆ ಒತ್ತು ನೀಡುತ್ತಿರುವ ಬಿಜೆಪಿಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೇಶ ಅಧೋಗತಿಗೆ: ಕೇಂದ್ರದಲ್ಲಿ ಎನ್ಡಿಎ ಸರ್ಕಾರ ಅಧಿಕಾರದಲ್ಲಿದ್ದಾಗ ದೇಶಾದ್ಯಂತ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದವು. ಆದರೆ, 10 ವರ್ಷಗಳವರೆಗೆ ಅಧಿಕಾರ ನಡೆಸಿದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ, ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣ ಮರೆಯಿತು. ಈ ಅವಧಿಯಲ್ಲಿ ಕೇಂದ್ರದ ಸಚಿವರು ಲಕ್ಷಾಂತರ ಕೋಟಿ ರು. ಲೂಟಿ ಮಾಡಿದರು.
ದೇಶದ ಅಭಿವೃದ್ಧಿ ಅಧೋಗತಿಗೆ ಇಳಿಯಿತು ಎಂದರು. ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದಾಗ ದೇಶ ಕಂಡ ಅಭಿವೃದ್ಧಿ ಪರ್ವ ಮತ್ತೊಮ್ಮೆ ಪ್ರಾರಂಭಗೊಳ್ಳಬೇಕೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು. ಮೋದಿ ಅವರು ಮುಖ್ಯಮಂತ್ರಿಯಾಗಿ ಗುಜರಾತಿನಲ್ಲಿ ಕೈಗೊಂಡಿರುವ ಕೆಲಸಗಳನ್ನು ಜನಸಾಮಾನ್ಯರಿಗೆ ತಿಳಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದರು.
ರಾಜ್ಯ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪಿ. ಮುನಿರಾಜು, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ಮೂಲಕ ನರೇಂದ್ರ ಮೋದಿ ಪ್ರಧಾನಿಯಾಗಲು ಪ್ರತಿಯೊಬ್ಬರೂ ಕಂಕಣಬದ್ಧರಾಗಬೇಕು ಎಂದು ತಿಳಿಸಿದರು.
10 ವರ್ಷಗಳಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ನಡೆಸಿದ ಹಗರಣಗಳು ದೇಶದ ಜನತೆಯಲ್ಲಿ ಅಸಮಾಧಾನವನ್ನುಂಟು ಮಾಡಿವೆ.
ಎನ್ಡಿಎ ಸರ್ಕಾರದಲ್ಲಿ ದೇಶಾದ್ಯಂತ ನಡೆದ ಅಭಿವೃದ್ಧಿ ಕಾರ್ಯಗಳು ಮತ್ತೊಮ್ಮೆ ಕಾಣಬೇಕೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಲೇಬೇಕು. ನರೇಂದ್ರ ಮೋದಿ ಪ್ರಧಾನಿಯಾದರೆ ಮಾತ್ರ ಜಾಗತಿಕ ಮಟ್ಟದಲ್ಲಿ ಕಳೆದುಕೊಂಡಿರುವ ದೇಶದ ಮರ್ಯಾದೆ ಮತ್ತೊಮ್ಮೆ ಮರಳಿ ಬರಲು ಸಾಧ್ಯ ಎಂದರು.
ಮೌನಕ್ಕೆ ಶರಣಾಗಿದ್ದಾರೆ ಸಿಎಂ: ರಾಜ್ಯದಲ್ಲಿಯೂ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಗಣಿ ಹಗರಣಗಳ ಬಗ್ಗೆ ಮಾತನಾಡುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಮೌನಕ್ಕೆ ಶರಣಾಗಿದ್ದಾರೆ. ಸಿದ್ದರಾಮಯ್ಯ ಅವರು ಪ್ರತಿನಿಧಿಸಿರುವ ವರುಣಾ ವಿಧಾನಸಭೆ ಕ್ಷೇತ್ರದವರೆಗೆ ಬೆಂಗಳೂರಿನಿಂದ ಬೈಕ್ ರ್ಯಾಲಿ ನಡೆಸುವ ಮೂಲಕ ಆ ಕ್ಷೇತ್ರದ ಜನತೆಗೆ ಸಿದ್ದರಾಮಯ್ಯ ಅವರ ಕುತಂತ್ರದ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.
ಶಾಸಕ ಅರವಿಂದ ಬೆಲ್ಲದ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗಳಿಸುವ ಮೂಲಕ ನರೇಂದ್ರ ಮೋದಿ ಪ್ರಧಾನಿಯಾಗುವುದು ಖಚಿತ ಎಂದರು. ಇದಕ್ಕೂ ಮೊದಲು ಮಹೇಂದ್ರ ಕೌತಾಳ ಪ್ರಾಸ್ತಾವಿಕ ಮಾತನಾಡಿದರು. ಮಾಜಿ ಶಾಸಕರಾದ ವೀರಭದ್ರಪ್ಪ ಹಾಲಹರವಿ, ಸೀಮಾ ಮಸೂತಿ, ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಲಿಂಗರಾಜ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.