ಮೂಲಸೌಕರ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ
ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯಲ್ಲಿ ಮೂಲ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಜೈಭೀಮ ಸೇನಾ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಹಳೇ ಹುಬ್ಬಳ್ಳಿ ಪ್ರದೇಶದಲ್ಲಿ ಸಮರ್ಪಕ ಕುಡಿಯುವ ನೀರಿನ ಪೂರೈಕೆ ಇಲ್ಲ. ರಸ್ತೆಗಳು ಇಕ್ಕಟ್ಟಾಗಿದ್ದು, ರಸ್ತೆ ಪಕ್ಕದಲ್ಲಿಯೇ ಬೀದಿ ವ್ಯಾಪಾರಸ್ಥರು ತರಕಾರಿ, ಹಣ್ಣು ಮಾರಾಟ ಮಾಡುತ್ತಾರೆ. ಸುಗಮ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.
ಈ ಕುರಿತು ಪಾಲಿಕೆ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ರಸ್ತೆ ಪಕ್ಕದ ವ್ಯಾಪಾರಸ್ಥರಿಂದ ಅಧಿಕಾರಿಗಳು ಹಣ ವಸೂಲಿ ಮಾಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಸಾಕಷ್ಟು ಸ್ಥಳಾವಕಾಶವಿದ್ದರೂ ಬೀದಿ ವ್ಯಾಪಾರಸ್ಥರನ್ನು ರಸ್ತೆ ಪಕ್ಕದಿಂದ ಎಬ್ಬಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಹಾನಗರ ಪಾಲಿಕೆ ಆಯುಕ್ತರು ತಕ್ಷಣ ಹಳೇ ಹುಬ್ಬಳ್ಳಿಗೆ ಭೇಟಿ ನೀಡಿ ಅವಶ್ಯಕ ಸೌಲಭ್ಯ ಒದಗಿಸಬೇಕು. ರಸ್ತೆ ಪಕ್ಕದ ವ್ಯಾಪಾರಸ್ಥರಿಗೆ ಎಂಟು ದಿನಗಳೊಳಗೆ ಮಾರುಕಟ್ಟೆಯಲ್ಲಿ ಸ್ಥಳಾವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಬೇಡಿಕೆ ಈಡೇರಿಕೆಗಾಗಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಸೇನಾ ಕಾರ್ಯಕರ್ತರಾದ ದ್ಯಾಮಣ್ಣ ಡೋಂಗಿ, ನಿಜಾಮುದ್ದೀನ್, ರವಿ ಹನುಮಸಾಗರ, ಅಷ್ಪಾಕ ಮುಜಾವರ, ರಾಜು ಭಜಂತ್ರಿ, ಅಸ್ಲಮ್ ಮುಲ್ಲಾ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.