ರೈತ ಆತ್ಮಹತ್ಯೆ: ಮುಖ್ಯಮಂತ್ರಿ ರಾಜಿನಾಮೆ ನೀಡಲಿ
ಕನ್ನಡಪ್ರಭ ವಾರ್ತೆ, ಧಾರವಾಡ, ನ. 27
ಬೆಳಗಾವಿ ಸುವರ್ಣ ಸೌಧ ಮುಂದೆ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ರಾಜ್ಯ ಸರ್ಕಾರವೇ ಕಾರಣವಾಗಿದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕರಣದ ನೈತಿಕ ಹೊಣೆಹೊತ್ತು ತಕ್ಷಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ಪ್ರಹ್ಲಾದ ಜೋಶಿ ಒತ್ತಾಯಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ರಾಜ್ಯ ಸರ್ಕಾರದ ಬೇಜವಾಬ್ದಾರಿ ಪರಮಾವಧಿಯಿಂದ ರಾಯಭಾಗದ ರೈತ ವಿಠ್ಠಲ ಅರಬಾವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಹಲವು ದಿನಗಳಿಂದ ಕಬ್ಬು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಸುವರ್ಣ ಸೌಧದ ಎದುರು ರೈತರು ಹಾಗೂ ರೈತಪರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ.
ಆದರೆ, ಸರ್ಕಾರ ರೈತರಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಸರ್ಕಾರದ ಆಡಳಿತಕ್ಕೆ ಬೇಸತ್ತ ರೈತ ವಿಠ್ಠಲ ಅವರು ವಿಷ ಸೇವಿಸಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ರೈತರಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿ ಮಾಡುವ ಬದಲು ಜಾತಿ ಆಧಾರದಲ್ಲಿ ಶಾದಿಭಾಗ್ಯ, ಶಾಲಾ ಮಕ್ಕಳ ಪ್ರವಾಸ ಹೀಗೆ ಯೋಜನೆಗಳನ್ನು ರೂಪಿಸುತ್ತಿದೆ. ಈ ಕುರಿತಂತೆ ಶಾಸಕಾಂಗ ಸಭೆಯಲ್ಲಿ ಪಕ್ಷದ ಶಾಸಕರು ವಿರೋಧ ವ್ಯಕ್ತಪಡಿಸಿದ್ದು ಅಲ್ಲದೆ, ಬಿಜೆಪಿ ಸೇರಿದಂತೆ ಕೆಜೆಪಿ, ಜೆಡಿಎಸ್ ಪಕ್ಷಗಳು ಸಭೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ನಿಯಮಾವಳಿ ಸೂಚನೆಗೆ ನೀಡಿದ್ದವು. ಆದರೆ, ಈ ವಿಷಯವನ್ನು ಆಡಳಿತಾರೂಢ ಪಕ್ಷ ಗಂಭೀರವಾಗಿ ಪರಿಗಣಿಸದೇ, ಬರೀ ಚರ್ಚೆಗೆ ಒಳಪಡಿಸಿತು. ಹಾಗಾಗಿ ಕಬ್ಬು ಬೆಳೆಗಾರರ ಸಮಸ್ಯೆ ಸಭೆಯಲ್ಲಿ ಚರ್ಚೆಯಾಗಿ ಉಳಿಯಿತು ಎಂದರು.
ಸುವರ್ಣ ಸೌಧದ ಎದುರು ವಿಷ ಸೇವಿಸಿ ಪ್ರಾಣ ಕಳೆದುಕೊಂಡ ಮೃತ ರೈತನ ಕುಟುಂಬಕ್ಕೆ ಸರ್ಕಾರ ಈ ಕೂಡಲೇ ರು. 10 ಲಕ್ಷ ಪರಿಹಾರ ನೀಡಬೇಕು. ಅಲ್ಲದೆ, ಕಬ್ಬು ಬೆಳೆಗಾರರ ಬೇಡಿಕೆಗೆ ಸರ್ಕಾರ ಸೂಕ್ತವಾಗಿ ಸ್ಪಂದಿಸಿ ಅವರ ಬೇಡಿಕೆಗೆ ಕ್ರಮಕೈಗೊಳ್ಳಬೇಕು.
ಸರ್ಕಾರ ದುರಹಂಕಾರದಿಂದ ವರ್ತಿಸುತ್ತಿದ್ದು, ಇದನ್ನು ಖಂಡಿಸಿ ನ. 28ರಂದು ಪಕ್ಷದ ರೈತ ಮೋರ್ಚಾದಿಂದ ರಾಜ್ಯಾದ್ಯಂತ ಜಿಲ್ಲಾ ಕೇಂದ್ರದಲ್ಲಿ ಬಿಜೆಪಿಯಿಂದ ಸಾಂಕೇತಿಕ ಧರಣಿ ನಡೆಸಲಾಗುವುದು.
ಆತ್ಮಹತ್ಯೆ ಮಾಡಿಕೊಂಡ ರೈತ ವಿಠ್ಠಲ ಅರಬಾವಿ ಕುಟುಂಬಕ್ಕೆ ಬಿಜೆಪಿಯಿಂದ ರು. 2 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪಾಲಿಕೆ ಸದಸ್ಯ ವಿಜಯಾನಂದ ಶೆಟ್ಟಿ, ಈರೇಶ ಅಂಚಟಗೇರಿ, ಪ್ರಕಾಶ ಗೋಡಬೋಲೆ, ಶಶಿಮೌಳಿ ಕುಲಕರ್ಣಿ, ಕಲಂದರ ಮುಲ್ಲಾ, ಮೋಹನ ರಾಮದುರ್ಗ ಮತ್ತಿತರರು ಉಪಸ್ಥಿತರಿದ್ದರು.