ನಾಳೆ ನ್ಯಾಯಾಲಯ ಸಂಕೀರ್ಣಕ್ಕೆ ಅಡಿಗಲ್ಲು
ಹುಬ್ಬಳ್ಳಿ: ಉಣಕಲ್ ರಸ್ತೆ ಬಳಿ ನಿರ್ಮಿಸಲು ಉದ್ದೇಶಿಸಿರುವ ನೂತನ ನ್ಯಾಯಾಲಯ ಸಂಕೀರ್ಣದ ಅಡಿಗಲ್ಲು ಸಮಾರಂಭ ಅ. 19ರಂದು ನಡೆಯಲಿದೆ ಎಂದು ಹುಬ್ಬಳ್ಳಿ ಬಾರ್ ಅಸೋಸಿಯೇಷನ್ ಅಧ್ಯಕ್ಷ ಬಿ.ಕೆ. ಪಾಟೀಲ ಹೇಳಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 5 ಎಕರೆ ಜಾಗದಲ್ಲಿ ರು. 75 ಕೋಟಿ ವೆಚ್ಚದಲ್ಲಿ ನ್ಯಾಯಾಲಯ ಸಂಕೀರ್ಣ ನಿರ್ಮಿಸಲಾಗುತ್ತಿದೆ. ಸುಪ್ರೀಂಕೋರ್ಟ್ ನ್ಯಾಯಾಧೀಶ ಎಚ್.ಎಲ್. ದತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಧಾರವಾಡ ಹೈಕೋರ್ಟ್ ಪೀಠದ ನ್ಯಾಯಾಧೀಶ ಮೋಹನ ಶಾಂತನಗೌಡ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಹುಬ್ಬಳ್ಳಿ ನಗರದ ಹೃದಯ ಭಾಗದಲ್ಲಿರುವ ಈಗಿನ ನ್ಯಾಯಾಲಯ ಜನದಟ್ಟಣೆ ಮತ್ತು ಸಂಚಾರ ದಟ್ಟಣೆಯಿಂದ ಕೂಡಿದೆ. ಇಕ್ಕಟ್ಟಾದ ಪ್ರದೇಶದಲ್ಲಿ ಈಗಿನ ನ್ಯಾಯಾಲಯ ಕಟ್ಟಡ ಇರುವ ಹಿನ್ನೆಲೆಯಲ್ಲಿ ಸಾಕಷ್ಟು ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಕಟ್ಟಡ ಸ್ಥಳಾಂತರಕ್ಕೆ ಸರ್ಕಾರ ಅನುಮತಿ ನೀಡಿ ಅನುದಾನ ಬಿಡುಗಡೆ ಮಾಡಿದೆ ಎಂದು ಹೇಳಿದರು. ರು. 75 ಕೋಟಿ ಯೋಜನಾ ವೆಚ್ಚದ ಪೈಕಿ ಸರ್ಕಾರ ಈಗಾಗಲೇ ರು. 25 ಕೋಟಿ ಬಿಡುಗಡೆ ಮಾಡಿದೆ. ನೂತನ ನ್ಯಾಯಾಲಯ ಕಟ್ಟಡದಲ್ಲಿ 20 ಕೋರ್ಟ್ ಹಾಲ್ಗಳನ್ನು ನಿರ್ಮಿಸಲಾಗುವುದು. ಬೆಂಗಳೂರು ಬಿಟ್ಟರೆ ಉತ್ತರ ಕರ್ನಾಟಕದಲ್ಲಿಯೇ ಹುಬ್ಬಳ್ಳಿ ನ್ಯಾಯಾಲಯ ಸಂಕೀರ್ಣ ವಿಶಾಲವಾದುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಾಧೀಶ ಎನ್.ಕೆ. ಪಾಟೀಲ, ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ, ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಮಾಜಿ ಸಿಎಂ ಜಗದೀಶ ಶೆಟ್ಟರ್, ಶಾಸಕ ಪ್ರಸಾದ ಅಬ್ಬಯ್ಯ ಉಪಸ್ಥಿತರಿರುವರು.