ದಾಖಲೆ ಪರಿಶೀಲಿಸಿ ಸಚಿವ ಲಾಡ್ ವಿರುದ್ಧ ಕ್ರಮ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಅ. 19
ಅಕ್ರಮ ಗಣಿಗಾರಿಕೆಯಲ್ಲಿ ಸಚಿವ ಸಂತೋಷ ಲಾಡ್ ಭಾಗಿಯಾಗಿರುವ ಕುರಿತು ರಾಜ್ಯಪಾಲರಿಗೆ ಸಲ್ಲಿಸಿರುವ ದಾಖಲೆಗಳು ಸರ್ಕಾರಕ್ಕೆ ತಲುಪಿದ ನಂತರ ದಾಖಲೆಗಳನ್ನು ಪರಿಶೀಲಿಸಿ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಕಠಿಣ ಕ್ರಮ ತೆಗೆದುಕೊಳ್ಳುವುದಕ್ಕೆ ಸರ್ಕಾರ ಬದ್ಧವಾಗಿದೆ. ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ.
ಎರಡು ಹಂತದಲ್ಲಿ ಲೋಕಾಯುಕ್ತರು ಸಲ್ಲಿಸಿರುವ ವರದಿಯನ್ನು ಆಧರಿಸಿ ಸರ್ಕಾರ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ಜೊತೆಗೆ ದೇಶದ ಇನ್ನಿತರ ಏಳು ಬಂದರುಗಳಿಂದ ಅಕ್ರಮವಾಗಿ ಅದಿರು ರಫ್ತು ಆಗಿರುವುದನ್ನು ತನಿಖೆಗೊಳಪಡಿಸಲು ಸಿಬಿಐಗೆ ವಹಿಸಿದೆ.
ರಾಜ್ಯದಲ್ಲಿ ಒಟ್ಟಾರೆ ನಡೆದಿರುವ ಅಕ್ರಮ ಗಣಿಗಾರಿಕೆಯನ್ನು ಪತ್ತೆ ಹಚ್ಚಲು ವಿಶೇಷ ತನಿಖಾ ತಂಡ ರಚಿಸುವುದಕ್ಕೆ ಸರ್ಕಾರ ತೀರ್ಮಾನಿಸಿದ್ದು, ಡಿಐಜಿ ಮಟ್ಟದ ಪೊಲೀಸ್ ಅಧಿಕಾರಿ ತಂಡದ ನೇತೃತ್ವ ವಹಿಸಲಿದ್ದಾರೆ ಎಂದು ಹೇಳಿದರು.
ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧದ ಪೂರ್ಣ ಉಪಯೋಗವಾಗಬೇಕು ಎನ್ನುವ ನಿಟ್ಟಿನಲ್ಲಿ ಈಗಾಗಲೇ ಸ್ಪೀಕರ್ ಮತ್ತು ಮುಖ್ಯಮಂತ್ರಿಯೊಂದಿಗೆ ಚರ್ಚಿಸಲಾಗಿದ್ದು, ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಸುವುದಕ್ಕೆ ಸರ್ಕಾರ ತೀರ್ಮಾನಿಸಿದೆ. ಈ ಬಾರಿಯ ಅಧಿವೇಶನ ಕನಿಷ್ಠ 15-20 ದಿನಗಳ ವರೆಗೆ ನಡೆಸಬೇಕು ಎಂದು ತೀರ್ಮಾನಿಸಲಾಗಿದೆ. ಸುವರ್ಣಸೌಧಕ್ಕೆ ಈ ಭಾಗಕ್ಕೆ ಸಂಬಂಧಿಸಿದ ಕಚೇರಿಗಳನ್ನು ಸ್ಥಳಾಂತರಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ, ಮಹಾನಗರ ಪಾಲಿಕೆ ಸದಸ್ಯ ಪಿ.ಕೆ. ರಾಯನಗೌಡ್ರ, ಮೋಹನ ಹೀರೇಮನಿ, ರಾಜಾ ದೇಸಾಯಿ ಸೇರಿದಂತೆ ಇನ್ನಿತರರು ಇದ್ದರು.