ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ವೈದ್ಯ, ಸಿಬ್ಬಂದಿ ಕೊರತೆಗೆ ಶೀಘ್ರ ಪರಿಹಾರ: ಸಚಿವ ಯು.ಟಿ. ಖಾದರ್

Rashmi Kasaragodu
Updated On : 27 Oct 2013, 1:00 am

ಹೊಸಪೇಟೆ: ತಾಲೂಕು ಮಟ್ಟದಲ್ಲಿರುವ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಈಗ ಸರ್ಕಾರದ ಮುಂದಿಲ್ಲ. ಆದರೆ ಆಸ್ಪತ್ರೆಗಳನ್ನು ಸಶಕ್ತಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆಯನ್ನು ನೀಗಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು.
ಅವರು ಶನಿವಾರ ಕೊಪ್ಪಳಕ್ಕೆ ತೆರಳುವ ಮುನ್ನ ಇಲ್ಲಿನ ನೂರು ಹಾಸಿಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸ್ಥಳೀಯ ಸರ್ಕಾರಿ ನೂರು ಹಾಸಿಗೆಯ ಆಸ್ಪತ್ರೆಯ ಕಟ್ಟಡ ನಿರ್ವಹಣೆ ಮತ್ತು ನಿರ್ಮಾಣಕ್ಕಾಗಿ ರು. 2 ಕೋಟಿ ಅನುದಾನ ಬಿಡುಗಡೆ ಮಾಡಲಾಗುತ್ತದೆ. ನೂರು ಹಾಸಿಗೆ ಆಸ್ಪತ್ರೆಯ ಕಟ್ಟಡ ಶಿಥಿಲಗೊಂಡಿರುವುದರಿಂದ ಹಣ ನೀಡಲಾಗುತ್ತಿದೆ. ಆಸ್ಪತ್ರೆಯ ಅಭಿವೃದ್ಧಿಗೆ ಹಣ ಬಳಸಿಕೊಳ್ಳುವಂತೆ ಸೂಚಿಸಲಾಗಿದೆ. ಆಸ್ಪತ್ರೆಯನ್ನು ಸ್ವಚ್ಛತೆಯಿಂದ ನೋಡಿಕೊಳ್ಳಬೇಕು. ರೋಗಿಗಳ ಜತೆಗೆ ವೈದ್ಯರು ಹಾಗೂ ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ನಾಗರಿಕರು ಸಹ ವೈದ್ಯರ ಮತ್ತು ಸಿಬ್ಬಂದಿ ಜತೆಗೆ ಸೌಜನ್ಯದಿಂದ ವರ್ತಿಸಿದಾಗ ಮಾತ್ರ ಉತ್ತಮ ರೀತಿಯಲ್ಲಿ ಸೇವೆ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು ಎಂದರು.
ಮನೆಗೆ ಬಿಡುವ ವ್ಯವಸ್ಥೆ: ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾದ ಬಾಣಂತಿಯರಿಗೆ ಹಾಗೂ ಮಗುವನ್ನು ಮನೆಗೆ ಬಿಡುವ ವ್ಯವಸ್ಥೆಯನ್ನು ಮುಂದಿನ ದಿನಗಳಲ್ಲಿ ಜಾರಿಗೆ ತರಲಾಗುವುದು. ಆರೋಗ್ಯಶ್ರೀ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿರುವವರ ಜತೆಗೆ ಎಪಿಎಲ್ ಕಾರ್ಡ್ ಇರುವವರಿಗೂ ಸಹ ಉಚಿತ ಚಿಕಿತ್ಸೆ ನೀಡುವ ಯೋಜನೆ ಸರ್ಕಾರದ ಮುಂದಿದೆ ಎಂದು ತಿಳಿಸಿದರು. ಖಾಸಗಿ ಆಸ್ಪತ್ರೆಗಳು ಸರ್ಕಾರದ ನಿಯಮಾನುಸಾರ ನಡೆಯಬೇಕು. ರೋಗಿಗಳಿಂದ ಯಾವುದೇ ಕಾರಣಕ್ಕೂ ಹೆಚ್ಚುವರಿ ಹಣ ವಸೂಲಿ ಮಾಡಬಾರದು. ರೋಗಿಗಳಿಂದ ಹೆಚ್ಚು ಹಣ ವಸೂಲಿ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ದೂರು ಬಂದಲ್ಲಿ ಅಂಥ ಆಸ್ಪತ್ರೆಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement