ಹಾಸ್ಟೆಲ್ ಸುಧಾರಣೆಗೆ ಆಗ್ರಹಿಸಿ ಪ್ರತಿಭಟನೆ
ಹುಬ್ಬಳ್ಳಿ: ಪ.ಜಾತಿ-ಪಂಗಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಹಾಸ್ಟೆಲ್ ಸುಧಾರಣೆಗೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಹಾಸ್ಟೆಲ್‌ಗಳಲ್ಲಿ ಮೂಲ ಸೌಲಭ್ಯಗಳಿಲ್ಲದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಎಂದು ದೂರಿದರು.
ರಾಜ್ಯದಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಲ್ಲಿ ಶೇ. 80ರಷ್ಟು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸುವ ಸ್ಥಿತಿ ಇಲ್ಲ. ಹಾಸ್ಟೆಲ್‌ಗಾಗಿ ಅರ್ಜಿ ಹಾಕಿರುವ ವಿದ್ಯಾರ್ಥಿಗಳಲ್ಲಿ ಶೇ. 50ರಷ್ಟು ವಿದ್ಯಾರ್ಥಿಗಳಿಗಾದರೂ ಹಾಸ್ಟೆಲ್ ಒದಗಿಸಲು ಅಗತ್ಯವಾದ ಹೊಸ ಹಾಸ್ಟೆಲ್‌ಗಳನ್ನು ನಿರ್ಮಿಸುವ ಕಾರ್ಯ ತುರ್ತಾಗಿ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ರಾಜ್ಯದಲ್ಲಿ ಕೇವಲ ಶೇ. 55ರಷ್ಟು ಹಾಸ್ಟೆಲ್‌ಗಳಿಗೆ ಮಾತ್ರ ಸ್ವಂತ ಕಟ್ಟಡಗಳಿವೆ. ಶೇ. 45ರಷ್ಟು ಹಾಸ್ಟೆಲ್‌ಗಳು ಬಾಡಿಗೆ ಕಟ್ಟಡದಲ್ಲಿವೆ. ರಾಜ್ಯದ ಎಲ್ಲ ಹಾಸ್ಟೆಲ್‌ಗಳಿಗೆ ಸ್ವಂತ ಕಟ್ಟಡ ನಿರ್ಮಿಸುವ ಯೋಜನೆಯನ್ನು ಹಂತ ಹಂತವಾಗಿ ಜಾರಿಗೆ ತರಬೇಕೆಂದು ಆಗ್ರಹಿಸಿದರು. ಚುನಾವಣೆ ಮುಗಿದಿದ್ದರೂ ಧಾರವಾಡ ಜಿಲ್ಲೆಯಲ್ಲಿ ಹಾಸ್ಟೆಲ್ ಪ್ರವೇಶ ಪಟ್ಟಿ ಬಿಡುಗಡೆ ಮಾಡಿಲ್ಲ. ರಾಜ್ಯದ ಎಲ್ಲ ಪ.ಜಾತಿ, ಪಂಗಡ, ಒಬಿಸಿ ಹಾಸ್ಟೆಲ್‌ಗಳಲ್ಲಿ ಪಟ್ಟಿ ಬಿಡುಗಡೆಯಾಗಿದ್ದರೂ ಧಾರವಾಡ ಜಿಲ್ಲೆಯಲ್ಲಿ ಬಿಡುಗಡೆಯಾಗಿಲ್ಲ. ತಕ್ಷಣ ಪಟ್ಟಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ ಪ್ರತಿಭಟನಾಕಾರರು, ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ತಕ್ಷಣ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
ಎಬಿವಿಪಿ ನಗರ ಕಾರ್ಯದರ್ಶಿ ತೇಜಸ್ ಗೋಕಾಕ್, ಸಿದ್ದು ಸಾಲಿಮಠ, ಬಸವರಾಜ ರೂಗಿ, ಸುಚಿತ ಬುಳ್ಳಾನವರ, ವೀರೇಶ ಹಿಪ್ಪರಗಿ ಮತ್ತಿತರರು ಪ್ರತಿಭಟನೆಯಲ್ಲಿದ್ದರು.