ಕಾಮಗಾರಿ ಮುಗಿದ ಬಳಿಕ ಹಣ ಪಾವತಿಸಿ
ನವಲಗುಂದ: ರಾಣಿ ಚನ್ನಮ್ಮ ಹಾಗೂ ಮೊರಾರ್ಜಿ ವಸತಿ ಶಾಲೆಗಳಲ್ಲಿ ಅವ್ಯವಸ್ಥೆ ಇದ್ದು, ವಿದ್ಯಾರ್ಥಿಗಳಿಗೆ ಎಲ್ಲ ಸೌಲಭ್ಯದ ವ್ಯವಸ್ಥೆ ಮಾಡಿ ಹಾಗೂ ಮೊರಾರ್ಜಿ ಶಾಲೆಯ ಕಟ್ಟಡದ ಕಾಮಗಾರಿ ಪೂರ್ಣಗೊಳ್ಳುವವರೆಗೂ ಗುತ್ತಿಗೆದಾರರಿಗೆ ಹಣ ಪಾವತಿಸಬಾರದೆಂದು ಶಾಸಕ ಎನ್.ಎಚ್. ಕೋನರಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿಯ ತಾಪಂ ಸಭಾಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಸ್ತೆ ಹಾಗೂ ಚರಂಡಿ ಕಾಮಗಾರಿಗಳು ವಿಳಂಬವಾಗುತ್ತಿವೆ ಎಂದು ಅನೇಕ ದೂರುಗಳು ಬರುತ್ತಿವೆ. ಕಾಮಗಾರಿ ಶೀಘ್ರವಾಗಿ ಮುಗಿಸಬೇಕು. ಹೆಸ್ಕಾಂನವರು ಯಾವುದೇ ಮುನ್ಸೂಚನೆ ನೀಡದೇ ಪದೇ ಪದೆ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿದ್ದಾರೆ. ವಿಚಾರಿಸಲು ದೂರವಾಣಿ ಕರೆ ಮಾಡಿದರೆ ಸ್ವೀಕರಿಸುವುದಿಲ್ಲವೆಂದು ಸಾರ್ವಜನಿಕರು ದೂರುಗಳು ಬರುತ್ತಿವೆ. ಆದರೆ, ಗ್ರೀಡ್‌ನಲ್ಲಿ ಕೆಲಸ ಮಾಡುವ ಸಿಬ್ಬಂದಿ ದೂರವಾಣಿ ಕರೆ ಸ್ವೀಕರಿಸದಿರುವ ಬಗ್ಗೆ ಮೇಲಧಿಕಾರಿಗಳಿಗೆ ತಿಳಿಸಿದ್ದೇವೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುತ್ತೇನೆಂದು ಕಾರ್ಯನಿರ್ವಾಹಕ ಅಭಿಯಂತರ ಶ್ರೀನಿವಾಸ ಉತ್ತರಿಸಿದರು.
ಪಡಿತರ ಒದಗಿಸಿ: ಎಸ್‌ಎಂಎಸ್ ಮಾಡದ ನಾಲ್ಕು ಸಾವಿರ ಫಲಾನುಭವಿಗಳಿಗೆ ಈ ತಿಂಗಳು ಪಡಿತರ ಕೊಡದಿದ್ದರಿಂದ ಅವರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಅಧಿಕಾರಿಗಳು ಅಂತಹ ಫಲಾನುಭವಿಗಳಿಗೆ ತಿಳಿವಳಿಕೆಗೆ ನೀಡಿ ಎಸ್‌ಎಂಎಸ್ ಮಾಡಲು ಸಹಕರಿಸಿ ಪಡಿತರ ಒದಗಿಸಬೇಕು. ಸರ್ಕಾರವೂ ಪಡಿತರ ವ್ಯವಸ್ಥೆ ಸರಿಯಾಗುವವರೆಗೆ ಎಲ್ಲರಿಗೂ ಅನ್ನಭಾಗ್ಯ ಯೋಜನೆ ಲಭಿಸುವಂತೆ ಸೂಕ್ತ ಆದೇಶ ಹೊರಡಿಸಬೇಕೆಂದು ಶಾಸಕ ಎನ್.ಎಚ್. ಕೋನರಡ್ಡಿ ಒತ್ತಾಯಿಸಿದರು.
ಎಸ್‌ಸಿಪಿ, ಟಿಎಸ್‌ಪಿ ಯೋಜನೆ: ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ಪ್ರಾರಂಭಿಸಿರುವ ಕಾಮಗಾರಿಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲು ಸರ್ಕಾರ ಆದೇಶ ಹೊರಡಿಸಿದ್ದರಿಂದ ಕಾಮಗಾರಿ ಸ್ಥಗಿತಗೊಳಿಸಬೇಕಾಗಿದೆ ಎಂದು ನೀರಾವರಿ ಇಲಾಖೆಯ ಅಧಿಕಾರಿಗಳು ತಿಳಿಸಿದಾಗ ಶಾಸಕರು ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ರುದ್ರಯ್ಯ ಅವರಿಗೆ ದೂರವಾಣಿ ಕರೆ ಮಾಡಿ ಪ್ರಾರಂಭವಾಗಿರುವ ಕಾಮಗಾರಿಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸದಂತೆ ಆದೇಶ ಹೊರಡಿಸಬೇಕೆಂದು ಒತ್ತಾಯಿಸಿದರು. ಗೈರಾದ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡುವಂತೆ ಸೂಚಿಸಿದರು.