ನಾಳೆ ಬ್ಯಾಂಕ್ ನೌಕರರ ಮುಷ್ಕರ
ಹುಬ್ಬಳ್ಳಿ: ಬ್ಯಾಂಕಿಂಗ್ ಕ್ಷೇತ್ರದ ಸುಧಾರಣೆ ಹೆಸರಿನಲ್ಲಿ ಕೇಂದ್ರ ಸರ್ಕಾರ ಜಾರಿ ಮಾಡುತ್ತಿರುವ ಜನವಿರೋಧಿ ಮತ್ತು ಕಾರ್ಮಿಕ ವಿರೋಧಿ ನೀತಿಯ ವಿರುದ್ಧ ಸಂಘಟಿತ ಹೋರಾಟಕ್ಕೆ ಬ್ಯಾಂಕಿಂಗ್ ಕ್ಷೇತ್ರದ ಸಿಬ್ಬಂದಿ ಒಗ್ಗಟ್ಟಾಗಬೇಕು ಎಂದು ಸಿಂಡಿಕೇಟ್ ಬ್ಯಾಂಕ್ ಎಂಪ್ಲಾಯಿಸ್ ಯೂನಿಯನ್ನ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ್ ಶ್ರೀವಾತ್ಸವ ಹೇಳಿದರು. ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆ ಮತ್ತು ಬ್ಯಾಂಕ್ ಎಂಪ್ಲಾಯಿಸ್ ಫೆಡರೇಷನ್ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಮುಷ್ಕರದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕಾರ್ಮಿಕರ ಮತ್ತು ಜನಸಾಮಾನ್ಯರ ಹಿತಾಸಕ್ತಿ ಕಡೆಗಣಿಸಿ ಬ್ಯಾಂಕಿಂಗ್ ಕ್ಷೇತ್ರವನ್ನು ಬಂಡವಾಳಶಾಹಿಗಳು ನಿಯಂತ್ರಿಸುವುದನ್ನು ವಿರೋಧಿಸಿ ಸೆ. 25ರಂದು ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದರು. ಸಭೆಯಲ್ಲಿ ಸಿಂಡಿಕೇಟ್ ಬ್ಯಾಂಕ್ ನೌಕರರ ಸಂಘದ ಕಾರ್ಯದರ್ಶಿ ಜಗದೀಶ ಶೆಟ್ಟಿ, ಉಪಾಧ್ಯಕ್ಷ ನರೇಂದ್ರ, ರಾಜ್ಯ ಸಮಿತಿ ಕಾರ್ಯದರ್ಶಿ ನಾಗರಾಜ ಶೆಟ್ಟಿ ಇನ್ನಿತರರು ಇದ್ದರು.